ಬೆಂಗಳೂರು,ಸೆ. 05 (DaijiworldNews/AK): ಭ್ರಷ್ಟಾಚಾರ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ರವಿಕುಮಾರ್ ರಾಜೀನಾಮೆ ಸಲ್ಲಿಸಿದ್ದಾರೆ.

ರವಿಕುಮಾರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ಭೋವಿ ಸಮಾಜದ ರಾಷ್ಟ್ರೀಯ ಅಧ್ಯಕ್ಷ ವೆಂಕಟೇಶ್ ಅವರು ಸುದ್ದಿಗೋಷ್ಠಿ ನಡೆಸಿ ಭ್ರಷ್ಟಾಚಾರದ ಬಗ್ಗೆ ಗಂಭೀರ ಆರೋಪ ಮಾಡಿದರು. ಅಲ್ಲದೇ ವಿಪಕ್ಷ ಬಿಜೆಪಿ ನಾಯಕರು ಸಹ ಈ ಬಗ್ಗೆ ಧ್ವನಿ ಎತ್ತಿದ್ದರು. ಈ ಪ್ರಕರಣ ರಾಜಕೀಯವಾಗಿ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಸಿಎಂ, ರಾಜೀನಾಮೆ ನೀಡುವಂತೆ ಸೂಚನೆ ನೀಡಿದ್ದರು. ಇದರ ಬೆನ್ನಲ್ಲೇ ಇದೀಗ ನಿಗಮದ ಅಧ್ಯಕ್ಷ ಸ್ಥಾನಕ್ಕೆ ರವಿಕುಮಾರ್ ರಾಜೀನಾಮೆ ನೀಡಿದ್ದಾರೆ.ಭೋವಿ ನಿಗಮದಲ್ಲಿ ಭ್ರಷ್ಟಾಚಾರ ಆರೋಪ: ಅಧ್ಯಕ್ಷ ರವಿಕುಮಾರ್ ರಾಜೀನಾಮೆ
ಭೋವಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿದೆ ಎಂಬ ಆರೋಪ ಸಂಬಂಧ ಕಳೆದ ವರ್ಷ (2024) ಆಗಸ್ಟ್ನಲ್ಲಿ ಬೆಂಗಳೂರಿನಲ್ಲಿರುವ ನಿಗಮದ ಕಚೇರಿ ಮೇಲೆ ಸಿಐಡಿ ದಾಳಿ ನಡೆಸಿತ್ತು. 2021-22ನೇ ಸಾಲಿನಲ್ಲಿ ಉದ್ಯಮಿಗಳಿಗೆ ಸಾಲ ನೀಡುವಾಗ ಅಕ್ರಮ ನಡೆದಿದ್ದು, ಲಕ್ಷಾಂತರ ರೂ. ಸಾಲಕೊಡಿಸುವ ಆಮಿಷವೊಡ್ಡಿ ಸಾರ್ವಜನಿಕ ದಾಖಲೆ ದುರ್ಬಳಕೆ ಜೊತೆಗೆ 10 ಕೋಟಿ ರೂಪಾಯಿಗೂ ಹೆಚ್ಚು ಹಣ ಅಕ್ರಮವಾಗಿ ವರ್ಗಾವಣೆ ಮಾಡಿದ ಆರೋಪದ ಆಧಾರದಲ್ಲಿ ಸಿಐಡಿ ದಾಳಿ ನಡೆದಿತ್ತು. ಆ ವಿಚಾರದಲ್ಲಿ ತನಿಖೆಯೂ ನಡೆಯುತ್ತಿದೆ. ಇದರ ನಡುವೆ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷರ ಮೇಲೆಯೇ ಕಮಿಷನ್ ಆರೋಪ ಕೇಳಿಬಂದಿತ್ತು.