ಬೆಂಗಳೂರು, ನ. 14 (DaijiworldNews/AA): ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ವೃಕ್ಷಮಾತೆ, ಪದ್ಮಶ್ರೀ ಪುರಸ್ಕೃತ ಸಾಲು ಮರದ ತಿಮ್ಮಕ್ಕ(114) ಕೊನೆಯುಸಿರೆಳೆದಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಜಯನಗರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ಮಧ್ಯಾಹ್ನ 12 ಗಂಟೆಗೆ ನಿಧನ ಹೊಂದಿದ್ದಾರೆ ಎಂದು ಆಸ್ಪತ್ರೆಯ ಮೂಲಗಳಿಂದ ತಿಳಿದುಬಂದಿದೆ.
ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನಲ್ಲಿ 1911ರ ಜೂನ್ 30ರಂದು ಜನಿಸಿದ್ದ ಸಾಲುಮರದ ತಿಮ್ಮಕ್ಕ, ಹುಲಿಕಲ್ ಗ್ರಾಮದ ಚಿಕ್ಕಯ್ಯರನ್ನು ವಿವಾಹವಾಗಿದ್ದರು. ಆದರೆ ದುರದೃಷ್ಟವಶಾತ್, ಇವರಿಗೆ ಮಕ್ಕಳಿರಲಿಲ್ಲ. ಹೀಗಾಗಿ ತಮಗೆ ಮಕ್ಕಳಿಲ್ಲದ ಕೊರಗನ್ನು ನೀಗಿಸಿಕೊಳ್ಳಲು ಮರೆಯಲು ರಸ್ತೆಯ ಬದಿಯಲ್ಲಿ ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಪೋಷಿಸಿ ಬೆಳೆಸಿದ್ದರು. ಈ ಮೂಲಕ ಅವರು ಸಾಲು ಮರದ ತಿಮ್ಮಕ್ಕೆ ಎಂದೇ ಪ್ರಸಿದ್ಧರಾದರು.
ಸಾಲು ಮರದ ತಿಮ್ಮಕ್ಕ ಅವರಿಗೆ 1995ರಲ್ಲಿ ರಾಷ್ಟ್ರೀಯ ಪೌರ ಪ್ರಶಸ್ತಿ, 1997ರಲ್ಲಿ ಇಂದಿರಾ ಪ್ರಿಯದರ್ಶಿನಿ ವೃಕ್ಷಮಿತ್ರ ಪ್ರಶಸ್ತಿ, ವೀರಚಕ್ರ ಪ್ರಶಸ್ತಿ, 2019ರಲ್ಲಿ ಪದ್ಮಶ್ರೀ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ, ನಾಡೋಜ ಪ್ರಶಸ್ತಿ ಲಭಿಸಿದೆ. ಜೊತೆಗೆ 2020ರಲ್ಲಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ನೀಡಿ, ಗೌರವಿಸಲಾಗಿದೆ.