ನವದೆಹಲಿ, ಡಿ. 14 (DaijiworldNews/AA): ಬಿಹಾರ ಸಚಿವ ನಿತಿನ್ ನಬಿನ್ ಅವರನ್ನು ತನ್ನ ರಾಷ್ಟ್ರೀಯ ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡುವುದಾಗಿ ಭಾರತೀಯ ಜನತಾ ಪಕ್ಷವು (ಬಿಜೆಪಿ) ಭಾನುವಾರ ಘೋಷಿಸಿದೆ.

ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರು ಹೊರಡಿಸಿದ ಅಧಿಕೃತ ಆದೇಶದಲ್ಲಿ, ಈ ನೇಮಕಾತಿಯನ್ನು ಪಕ್ಷದ ಸಂಸದೀಯ ಮಂಡಳಿಯು ಅನುಮೋದಿಸಿದೆ ಎಂದು ತಿಳಿಸಲಾಗಿದೆ. ನಿತಿನ್ ನಬಿನ್ ಪ್ರಸ್ತುತ ನಿತೀಶ್ ಕುಮಾರ್ ನೇತೃತ್ವದ ಬಿಹಾರ ಸರ್ಕಾರದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
"ಬಿಜೆಪಿ ಸಂಸದೀಯ ಮಂಡಳಿಯು ಬಿಹಾರ ಸರ್ಕಾರದ ಸಚಿವರಾದ ನಿತಿನ್ ನಬಿನ್ ಅವರನ್ನು ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಕಾರ್ಯಾಧ್ಯಕ್ಷರನ್ನಾಗಿ ನೇಮಿಸಿದೆ" ಎಂದು ಆದೇಶದಲ್ಲಿ ಹೇಳಲಾಗಿದೆ.
"ಪಕ್ಷದ ನಿಷ್ಠಾವಂತ ಕಾರ್ಯಕರ್ತ, ಪಕ್ಷದ ಚಟುವಟಿಕೆಗಳಲ್ಲಿ ಗುರುತಿಸಿಕೊಂಡಿರುವ ನಾಯಕ ನಿತಿನ್ ನಬಿನ್ಗೆ ಅಭಿನಂದನೆಗಳು. ಯುವನಾಯಕ ತನ್ನ ಕಠಿಣ ಪರಿಶ್ರಮದ ಮೂಲಕ ಪಕ್ಷದಲ್ಲಿ ಅಪಾರ ಅನುಭವ ಪಡೆದಿದ್ದಾರೆ. ಬಿಹಾರದಲ್ಲಿ ಶಾಸಕರಾಗಿ, ಸಚಿವರಾಗಿ ಉತ್ತಮ ಸೇವೆ ಸಲ್ಲಿಸಿದ್ದಾರೆ. ಜನರ ಆಶೋತ್ತರಗಳು, ಅವರ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ. ಪ್ರತಿಯೊಬ್ಬರನ್ನು ಗೌರವದಿಂದ ಕಾಣುವ ನಿತಿನ್ ಕಾರ್ಯಾಧ್ಯಕ್ಷತೆಯಲ್ಲಿ ಬಿಜೆಪಿ ಮತ್ತಷ್ಟು ಉತ್ತುಂಗಕ್ಕೆ ಏರಲಿದೆ. ನಿತಿನ್ ನಬಿನ್ ಮೇಲೆ ನನಗೆ ಸಂಪೂರ್ಣ ವಿಶ್ವಾಸವಿದೆ" ಎಂದು ನಿತಿನ್ ನಬಿನ್ ನೇಮಕಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.