ಮೈಸೂರು, ಮಾ. 29 (DaijiworldNews/AA): ನ್ಯಾಯ ವಿತರಣೆಯಲ್ಲಿ ಪೊಲೀಸರು ಯಾವುದೇ ಕಾರಣಕ್ಕೂ ರಾಜಿಯಾಗಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮೈಸೂರು ಘಟಕದ 46ನೇ ತಂಡದ ಸಿವಿಲ್ ಪೊಲೀಸ್ ಉಪ ನಿರೀಕ್ಷಕ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚಲನದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, "ಪೊಲೀಸ್ ಸೇವೆಯಲ್ಲಿ ಶಿಸ್ತು ಸಂಯಮ, ಪ್ರಾಮಾಣಿಕತೆ, ಮಾನವೀಯತೆ ಬಹಳ ಮುಖ್ಯ. ಸಮಾಜದಲ್ಲಿನ ಜಾತಿ ವ್ಯವಸ್ಥೆಯಿದ್ದು, ದೀನ ದಲಿತರ, ಅಶಕ್ತರ, ಮಹಿಳೆಯರ ರಕ್ಷಣೆ ಮಾಡುವುದು ಪೊಲೀಸರ ಜವಾಬ್ದಾರಿ. ಮಧ್ಯರಾತ್ರಿಯಲ್ಲಿ ಮಹಿಳೆಯರು ನಿರ್ಭೀತಿಯಿಂದ ಓಡಾಡುವಂತಾದಾಗ ಮಾತ್ರ, ನಿಜ ಅರ್ಥದಲ್ಲಿ ಸ್ವಾತಂತ್ರ್ಯ ದೊರೆತಂತೆ ಎಂದು ಮಹಾತ್ಮ ಗಾಂಧಿಯವರು ಹೇಳಿದ್ದರು. ಸಮಾಜದ ಪ್ರತಿಯೊಬ್ಬರಿಗೂ ಆರ್ಥಿಕ, ಸಾಮಾಜಿಕ ಸಮಾನತೆ ದೊರೆಯಬೇಕು. ಆದ್ದರಿಂದ ನ್ಯಾಯವನ್ನು ಎತ್ತಿಹಿಡಿಯುವ ಕೆಲಸದಲ್ಲಿ ಪೊಲೀಸರು ಯಾವುದೇ ಕಾರಣಕ್ಕೂ ರಾಜಿಯಾಗಬಾರದು. ಎಲ್ಲರಿಗೂ ರಕ್ಷಣೆ, ಸಮಾನ ಅವಕಾಶಗಳು ದೊರೆಯಬೇಕು. ಪೊಲೀಸರು ಸರ್ಕಾರದ ಪ್ರತಿನಿಧಿಯಾಗಿ ಕರ್ತವ್ಯ ನಿರ್ವಹಿಸಬೇಕಲ್ಲದೇ, ಕಾನೂನು ಸುವ್ಯವಸ್ಥೆಯನ್ನು ಕಾಯುವಲ್ಲಿ ಮಹತ್ವದ ಪಾತ್ರ ವಹಿಸಬೇಕು" ಎಂದು ಹೇಳಿದರು.
"ತರಬೇತಿಯಲ್ಲಿ ಕಲಿತಿದ್ದನ್ನು ಜ್ಞಾಪಕವಿಟ್ಟುಕೊಂಡು ಜೀವನದಲ್ಲಿ ಪಾಲಿಸಬೇಕು. ತರಬೇತಿಗಳು ಆಗಾಗ್ಗೆ ನಡೆಯಬೇಕಲ್ಲದೆ ತರಬೇತಿ ಜೀವನದ ಅಂಗವಾಗಬೇಕು. 377 ಸಬ್ ಇನ್ಸ್ಪೆಕ್ಟರ್ಗಳು ಸೇವೆಗೆ ಸೇರ್ಪಡೆಯಾಗುತ್ತಿದ್ದು, ಖಾಲಿಯಿದ್ದ 4,911 ಹುದ್ದೆಗಳನ್ನು ಮೂರು ವರ್ಷಗಳಲ್ಲಿ ಭರ್ತಿ ಮಾಡಲಾಗಿದೆ. ಖಾಲಿ ಇರುವ 8,000 ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಬಜೆಟ್ ನಲ್ಲಿ ಘೋಷಿಸಲಾಗಿದೆ. ಅದನ್ನು ಮಾಡಿಯೇ ತೀರುತ್ತೇವೆ. ಸರ್ಕಾರ ಸದಾ ನಿಮ್ಮೊಂದಿಗಿರುತ್ತದೆ" ಎಂದರು.