ಬೆಂಗಳೂರು, ಏ. 15 (DaijiworldNews/TA): ನಗರದ ಹೃದಯಭಾಗದಲ್ಲಿರುವ ಕೆ.ಆರ್. ಮಾರ್ಕೆಟ್ ಸಮೀಪ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಸ್ಥಳೀಯರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಮಾರ್ಕೆಟ್ ಬಳಿಯ ಕಸದ ರಾಶಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, ಕ್ಷಣಾರ್ಧದಲ್ಲಿ ಜ್ವಾಲೆಗಳು ವ್ಯಾಪಿಸಿ ಸಂಪೂರ್ಣ ಕಸದ ರಾಶಿ ಸುಟ್ಟು ಬೂದಿಯಾಗಿದೆ. ಬೆಂಕಿಯಿಂದ ಹೊರಹೊಮ್ಮಿದ ದಟ್ಟ ಹೊಗೆ ಸುತ್ತಮುತ್ತಲಿನ ಪ್ರದೇಶವನ್ನು ಆವರಿಸಿಕೊಂಡಿದ್ದು, ಜನರಿಗೆ ಉಸಿರಾಟದ ತೊಂದರೆ ಉಂಟಾಗಿದೆ. ಜೊತೆಗೆ, ಹೊಗೆಯಿಂದಾಗಿ ಗೋಚರತೆ ಕೂಡ ಕಡಿಮೆಯಾಗಿದ್ದು, ವಾಹನ ಸಂಚಾರಕ್ಕೂ ಅಡಚಣೆ ಉಂಟಾಗಿದೆ ಎಂದು ತಿಳಿದುಬಂದಿದೆ.
ಘಟನೆಯ ಮಾಹಿತಿ ಸಿಕ್ಕ ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಬೆಂಕಿಯನ್ನು ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಈ ಘಟನೆ ಹಿನ್ನೆಲೆಯಲ್ಲಿ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.