ಪಾಟ್ನಾ, ಏ. 15 (DaijiworldNews/TA): ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಅವರು ಪ್ರಮಾಣವಚನ ಸ್ವೀಕರಿಸಿದರು. ಈ ಮೂಲಕ ಬಿಹಾರದಲ್ಲಿ ಬಿಜೆಪಿಯ ಮೊದಲ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾದರು.

ಪಾಟ್ನಾದ ಲೋಕ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಸೈಯದ್ ಅತಾ ಹಸ್ನೈನ್ ಅವರು ಸಾಮ್ರಾಟ್ ಚೌಧರಿಯವರಿಗೆ ಪ್ರಮಾಣವಚನ ಬೋಧಿಸಿದರು. ಇದೇ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿಗಳಾಗಿ ಜೆಡಿಯು ನಾಯಕರುಗಳಾದ ವಿಜಯ್ ಚೌಧರಿ ಹಾಗೂ ಬಿಜೇಂದ್ರ ಯಾದವ್ ಅವರು ಕೂಡ ಪ್ರಮಾಣವಚನ ಸ್ವೀಕರಿಸಿದರು.
ಪ್ರಮಾಣವಚನ ಸ್ವೀಕರಿಸಿದ ಬಳಿಕ ಮಾತನಾಡಿದ ಉಪ ಮುಖ್ಯಮಂತ್ರಿ ವಿಜಯ್ ಚೌಧರಿ, ಮಾಜಿ ಸಿಎಂ ನಿತೀಶ್ ಕುಮಾರ್ ಅವರೊಂದಿಗೆ ಕೆಲಸ ಮಾಡಿದ ಅನುಭವದಿಂದ ಸಾಕಷ್ಟು ಕಲಿತಿದ್ದೇವೆ. ಅವರ ಕಾರ್ಯ ಶೈಲಿಯನ್ನು ಮುಂದುವರಿಸಿಕೊಂಡು ಅಭಿವೃದ್ಧಿ ಕಾರ್ಯಗಳನ್ನು ನಡೆಸಲಾಗುತ್ತದೆ ಎಂದು ಹೇಳಿದರು.
ಇದೇ ವೇಳೆ ಉಪ ಮುಖ್ಯಮಂತ್ರಿ ಬಿಜೇಂದ್ರ ಯಾದವ್ ಮಾತನಾಡಿ, ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಕೂಡ ನಿತೀಶ್ ಕುಮಾರ್ ಅವರ ಪರಂಪರೆಯನ್ನು ಮುಂದುವರಿಸಲಿದ್ದಾರೆ. ಸರ್ಕಾರದಲ್ಲಿ ಯಾವುದೇ ಗೊಂದಲವಿಲ್ಲ, ನಾವು ಒಗ್ಗಟ್ಟಾಗಿ ರಾಜ್ಯದ ಅಭಿವೃದ್ಧಿಗೆ ಶ್ರಮಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯಸಭೆಗೆ ಆಯ್ಕೆಯಾಗಿರುವ ಹಿನ್ನೆಲೆ ನಿತೀಶ್ ಕುಮಾರ್ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ತಮ್ಮ ಸಚಿವ ಸಂಪುಟವನ್ನು ವಿಸರ್ಜಿಸಿದ ನಂತರ ಏಪ್ರಿಲ್ 14ರಂದು ಮಧ್ಯಾಹ್ನ ಅವರು ರಾಜ್ಯಪಾಲ ಸೈಯದ್ ಅತಾ ಹಸ್ನೈನ್ ಅವರಿಗೆ ರಾಜೀನಾಮೆ ಸಲ್ಲಿಸಿದ್ದರು.