ಲಕ್ನೋ , ಜೂ. 22 (DaijiworldNews/AK): ಉತ್ತರ ಪ್ರದೇಶದ ಲಕ್ನೋದಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ 14 ಮಂದಿ ಮೃತಪಟ್ಟಿದ್ದಾರೆ. ಈ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ಲಕ್ನೋದ ಅಲಿಗಂಜ್ ಪ್ರದೇಶದಲ್ಲಿರುವ ತರಬೇತಿ ಕೇಂದ್ರವಿರುವ ಮೂರು ಅಂತಸ್ತಿನ ಕಟ್ಟಡದಲ್ಲಿ ಸೋಮವಾರ ಬೆಂಕಿ ಕಾಣಿಸಿಕೊಂಡಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಬೆಂಕಿ ಕ್ಷಣಾರ್ಧದಲ್ಲಿ ಕಟ್ಟಡದ ಹಲವು ಭಾಗಗಳಿಗೆ ವ್ಯಾಪಿಸಿತು. ಇದರಿಂದ ವಿದ್ಯಾರ್ಥಿಗಳು ಸೇರಿದಂತೆ ಹಲವರು ಕಟ್ಟಡದೊಳಗೆ ಸಿಲುಕಿಕೊಂಡಿದ್ದರು. ಪ್ರಾಣ ಉಳಿಸಿಕೊಳ್ಳಲು ಕೆಲ ವಿದ್ಯಾರ್ಥಿಗಳು ಮೊದಲ ಮಹಡಿಯಿಂದ ಕೆಳಕ್ಕೆ ಜಿಗಿದಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ಆರಂಭಿಸಿದರು. ಹಲವು ಗಂಟೆಗಳ ಕಾರ್ಯಾಚರಣೆಯ ಬಳಿಕ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು. ದುರಂತದಲ್ಲಿ 14 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.