ಲಕ್ನೋ, ಜೂ. 23 (DaijiworldNews/AA): ಕನಿಷ್ಠ 15 ವಿದ್ಯಾರ್ಥಿಗಳ ಸಾವಿಗೆ ಕಾರಣವಾದ ಲಕ್ನೋದ ಅಲಿಗಂಜ್ ಕೋಚಿಂಗ್ ಸೆಂಟರ್ನಲ್ಲಿ ನಡೆದ ಭೀಕರ ಅಗ್ನಿ ದುರಂತಕ್ಕೆ ಸಂಬಂಧಿಸಿದಂತೆ ನಾಲ್ವರು ಹಿರಿಯ ಅಧಿಕಾರಿಗಳನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದ್ದು, ಕೋಚಿಂಗ್ ಸೆಂಟರ್ ಮಾಲೀಕರು ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

ಅಗ್ನಿ ಅವಘಡದಲ್ಲಿ ಮೃತಪಟ್ಟವರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ಸಿಎಂ ಯೋಗಿ ಆದಿತ್ಯನಾಥ್ ಅವರ ಸೂಚನೆಯ ಮೇರೆಗೆ, ಇಬ್ಬರು ಸದಸ್ಯರ ವಿಶೇಷ ತನಿಖಾ ತಂಡ ರಚಿಸಲಾಗಿದೆ. 7 ದಿನಗಳಲ್ಲಿ ತನ್ನ ವರದಿಯನ್ನು ಸಲ್ಲಿಸುವಂತೆ ತಂಡಕ್ಕೆ ಸೂಚಿಸಲಾಗಿದೆ.
ಅಗ್ನಿ ಅವಘಡದ ಬೆನ್ನಲ್ಲೇ ಲಕ್ನೋ ಅಭಿವೃದ್ಧಿ ಪ್ರಾಧಿಕಾರ ಮಾಲೀಕರಿಗೆ ಕಟ್ಟಡವನ್ನು ತೆರವುಗೊಳಿಸುವಂತೆ ಆದೇಶ ಹೊರಡಿಸಿದೆ. ಒಂದು ವೇಳೆ ತೆರವುಗೊಳಿಸದಿದ್ದರೆ ಖುದ್ದು ಪ್ರಾಧಿಕಾರವೇ ಕಟ್ಟಡವನ್ನು ನೆಲಸಮಗೊಳಿಸುವುದಾಗಿ ತಿಳಿಸಿದೆ.