ಬೆಂಗಳೂರು, ಜೂ. 24 (DaijiworldNews/TA): ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಲ್ಲಿ ಬ್ರ್ಯಾಂಡೆಡ್ ಔಷಧಿಗಳ ಮಾರಾಟ ನಡೆಯುತ್ತಿರುವ ಆರೋಪದ ಹಿನ್ನೆಲೆಯಲ್ಲಿ ರಾಜ್ಯ ಔಷಧ ನಿಯಂತ್ರಣ ಇಲಾಖೆ ಕಠಿಣ ಕ್ರಮಕ್ಕೆ ಮುಂದಾಗಿದೆ. ಕಳೆದ ಎರಡು ದಿನಗಳಲ್ಲಿ ನಡೆಸಿದ ವಿಶೇಷ ಪರಿಶೀಲನಾ ಕಾರ್ಯಾಚರಣೆಯಲ್ಲಿ 172 ಜನೌಷಧಿ ಕೇಂದ್ರಗಳ ಮೇಲೆ ದಾಳಿ ನಡೆಸಲಾಗಿದ್ದು, 133 ಕೇಂದ್ರಗಳಲ್ಲಿ ನಿಯಮ ಉಲ್ಲಂಘನೆ ಪತ್ತೆಯಾದ ಹಿನ್ನೆಲೆ ಶೋಕಾಸ್ ನೋಟಿಸ್ ಜಾರಿಗೊಳಿಸಲಾಗಿದೆ.

ರಾಜ್ಯದಲ್ಲಿ 1,200ಕ್ಕೂ ಹೆಚ್ಚು ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಮೊದಲ ಹಂತದಲ್ಲಿ 172 ಕೇಂದ್ರಗಳನ್ನು ಪರಿಶೀಲಿಸಲಾಗಿದೆ. ಈ ಪೈಕಿ 133 ಕೇಂದ್ರಗಳಲ್ಲಿ ಜನೌಷಧಿ ಯೋಜನೆಯ ಉದ್ದೇಶಕ್ಕೆ ವಿರುದ್ಧವಾಗಿ ಬ್ರ್ಯಾಂಡೆಡ್ ಔಷಧಿಗಳನ್ನು ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜನೌಷಧಿ ಕೇಂದ್ರಗಳಲ್ಲಿ ಕಡಿಮೆ ದರದ ಗುಣಮಟ್ಟದ ಜೆನೆರಿಕ್ ಔಷಧಿಗಳನ್ನು ಸಾರ್ವಜನಿಕರಿಗೆ ಒದಗಿಸುವ ಉದ್ದೇಶವಿದ್ದು, ಬ್ರ್ಯಾಂಡೆಡ್ ಔಷಧಿಗಳ ಮಾರಾಟ ನಿಯಮಗಳಿಗೆ ವಿರುದ್ಧವಾಗಿದೆ. ಈ ಹಿನ್ನೆಲೆಯಲ್ಲಿ ಸಂಬಂಧಿತ ಕೇಂದ್ರಗಳ ಮಾಲೀಕರಿಗೆ ಕಾರಣ ಕೇಳಿ ಶೋಕಾಸ್ ನೋಟಿಸ್ ನೀಡಲಾಗಿದೆ.
ನೋಟಿಸ್ಗೆ ಸಮರ್ಪಕ ಉತ್ತರ ನೀಡದಿದ್ದಲ್ಲಿ ಅಥವಾ ನಿಯಮ ಉಲ್ಲಂಘನೆ ದೃಢಪಟ್ಟಲ್ಲಿ ಕಾನೂನು ಕ್ರಮ ಕೈಗೊಳ್ಳುವುದಾಗಿ ರಾಜ್ಯ ಔಷಧ ನಿಯಂತ್ರಣ ಇಲಾಖೆ ಎಚ್ಚರಿಕೆ ನೀಡಿದೆ. ಇನ್ನೂ ರಾಜ್ಯದ ಉಳಿದ ಜನೌಷಧಿ ಕೇಂದ್ರಗಳ ಮೇಲೂ ಹಂತ ಹಂತವಾಗಿ ಪರಿಶೀಲನೆ ನಡೆಸಲಾಗುವುದು ಎಂದು ಇಲಾಖೆ ತಿಳಿಸಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಕೇಂದ್ರಗಳ ವಿರುದ್ಧ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ.