ಬೆಂಗಳೂರು, ಸೆ.11(Daijiworld News/SS): ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಾಜಿ ಸಚಿವ ಡಿ. ಕೆ. ಶಿವಕುಮಾರ್ರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ. ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಬಂಧನ ವಿರೋಧಿಸಿ ಇಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಪ್ರತಿಭಟನಾ ಮೆರವಣಿಗೆ ಬೆಳಗ್ಗೆ 11 ಗಂಟೆಗೆ ಆರಂಭವಾಗಿ ನ್ಯಾಷನಲ್ ಕಾಲೇಜು ಮೈದಾನ- ವಾಣಿ ವಿಲಾಸ ರಸ್ತೆ- ಸಜ್ಜನ್ ರಾವ್ ಸರ್ಕಲ್- ಮಿನರ್ವ ಸರ್ಕಲ್- ಜೆಸಿ ರಸ್ತೆ- ಶಿವಾಜಿ ಜಂಕ್ಷನ್- ಟೌನ್ ಹಾಲ್- ಮೈಸೂರು ಬ್ಯಾಂಕ್ ಮೂಲಕವಾಗಿ ಫ್ರೀಡಂ ಪಾರ್ಕ್ ತಲುಪಲಿದೆ.
ಪ್ರತಿಭಟನೆ ಹಿನ್ನೆಲೆಯಲ್ಲಿ ನಗರದ ರಸ್ತೆ ಸಂಚಾರದಲ್ಲಿ ಬದಲಾವಣೆಗಳನ್ನು ಮಾಡಲಾಗಿದೆ. ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇರುವುದರಿಂದ, 13 ರಸ್ತೆಗಳಲ್ಲಿ ಸಂಚಾರ ಬದಲಾವಣೆ ಮಾಡಲಾಗಿದ್ದು 9 ಕಡೆಗಳಲ್ಲಿ ವಾಹನ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ. ಸುಮಾರು 25 ರಸ್ತೆಗಳಲ್ಲಿ ವಾಹನ ನಿಲುಗಡೆಗೆ ನಿಷೇಧ ಹೇರಲಾಗಿದೆ.
ಪ್ರತಿಭಟನೆ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಪೊಲೀಸ್ ಬಂಧೋಬಸ್ಥ್ ಕೈಗೊಳ್ಳಲಾಗಿದೆ. ಕೋಲಾರ, ಕನಕಪುರ, ರಾಮನಗರ ಭಾಗದಿಂದ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಡಿಕೆಶಿ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ನಿರೀಕ್ಷೆ ಇದ್ದು, ಯಾವುದೇ ಅಹಿತಕರ ಘಟನೆ ನಡೆದರೆ ಆಯೋಜಕರ ವಿರುದ್ಧ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ಪೊಲೀಸರು ನೀಡಿದ್ದಾರೆ.