ರಾಮನಗರ, ಸೆ.11(Daijiworld News/SS): ಬಿಜೆಪಿಯವರು ನನ್ನನ್ನು ಪ್ರಕರಣಗಳಲ್ಲಿ ಸಿಲುಕಿಸಲು ಸಾಧ್ಯವಿಲ್ಲ ಎಂದು ಶಾಸಕ ಎಚ್.ಡಿ. ಕುಮಾರಸ್ವಾಮಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಜೀವನದಲ್ಲಿ ನಾನೆಂದು ತಪ್ಪುಗಳಿಗೆ ಅವಕಾಶ ಕೊಟ್ಟಿಲ್ಲ. ನಾನು ಯಾವುದೇ ತಪ್ಪು ಮಾಡುವುದೂ ಇಲ್ಲ. ಹಾಗಾಗಿ ಬಿಜೆಪಿಯವರು ನನ್ನನ್ನು ಪ್ರಕರಣಗಳಲ್ಲಿ ಸಿಲುಕಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು.
ಡಿಕೆಶಿ ಬಂಧನವನ್ನು ಖಂಡಿಸಿ ನಡೆಯುತ್ತಿರುವ ಪ್ರತಿಭಟನೆಯ ವಿಚಾರವಾಗಿ ಮಾತನಾಡಿದ ಅವರು, ಶಾಸಕ ಡಿ.ಕೆ. ಶಿವಕುಮಾರ್ ಬಂಧನ ಖಂಡಿಸಿ ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆಗೆ ಮುಂಚೆಯೇ ಆಹ್ವಾನ ನೀಡಿದ್ದರೆ ನಾನೂ ಹೋಗುತ್ತಿದ್ದೆ. ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಜೆಡಿಎಸ್ ಕಾರ್ಯಕರ್ತರಿಗೆ ತಿಳಿಸಿದ್ದೇನೆ. ಸಂಘಟಕರು ತರಾತುರಿಯಲ್ಲಿ ಕಾರ್ಯಕ್ರಮ ನಿಗದಿ ಮಾಡಿದ್ದಾರೆ. ನನ್ನ ಗಮನಕ್ಕೆ ತಂದಿಲ್ಲ ಎಂದು ತಿಳಿಸಿದರು.