ಬೆಂಗಳೂರು, ಸೆ.12(Daijiworld News/SS): ಅಕ್ರಮ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ನೀಡಿದ್ದ ಸಮನ್ಸ್ ರದ್ದುಗೊಳಿಸಲು ನಿರಾಕರಿಸಿದ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಶಾಸಕ ಡಿ.ಕೆ.ಶಿವಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಸೆ.16ಕ್ಕೆ ಮುಂದೂಡಿದೆ.
ಮೇಲ್ಮನವಿ ಅರ್ಜಿ ವಿಚಾರಣೆಗೆ ಬಂದಾಗ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ ವಿಭಾಗೀಯ ಪೀಠ ಇದೇ ಪ್ರಕರಣಕ್ಕೆ ಸಂಬಂಧಿಸಿದ ಇತರ ಅರ್ಜಿಗಳು ಸೆ. 16ರಂದು ವಿಚಾರಣೆಗೆ ಬರುವುದರಿಂದ ಇದನ್ನೂ ಅಂದೇ ಪರಿಗಣಿಸಲಾಗುವುದು ಎಂದು ಸ್ಪಷ್ಟಪಡಿಸಿದೆ.
ನವದೆಹಲಿಯ ಮನೆಯಲ್ಲಿ 8.6 ಕೋಟಿ ರೂ. ಅಕ್ರಮ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ಜಾರಿ ಮಾಡಿದ್ದ ಸಮನ್ಸ್ ಪ್ರಶ್ನಿಸಿ ಡಿ.ಕೆ.ಶಿವಕುಮಾರ್ ಅರ್ಜಿ ಸಲ್ಲಿಸಿದ್ದರು. ಆದರೆ, ನ್ಯಾಯಮೂರ್ತಿ ಅರವಿಂದ ಕುಮಾರ್ ಅವರಿದ್ದ ಏಕಸದಸ್ಯ ಪೀಠ ಈ ಅರ್ಜಿಯನ್ನು ವಜಾಗೊಳಿಸಿತ್ತು. ಕಳೆದ ನಾಲ್ಕು ದಿನಗಳ ವಿಚಾರಣೆ ನಡೆಸಿದ್ದ ಇಡಿ ಅಧಿಕಾರಿಗಳು ಡಿ.ಕೆ.ಶಿವಕುಮಾರ್ ಅವರನ್ನು ಬಂಧಿಸಿದ್ದು, ವಿಚಾರಣೆ ಮುಂದುವರಿಸಿದ್ದಾರೆ.