ಬೆಂಗಳೂರು,ಸೆ 12 (Daijiworld News/RD): ಪದವಿಪೂರ್ವ ವಿದ್ಯಾರ್ಥಿಗಳಿಗೂ ಮಧ್ಯಾಹ್ನಬಿಸಿಯೂಟ ವಿತರಿಸುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು ಅದಮ್ಯ ಚೇತನ ಮತ್ತು ಶ್ರೀ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ಗಳ ಸಹಯೋಗದಲ್ಲಿ ಪೌಷ್ಠಿಕಾಂಶಯುಕ್ತ ಹಾಲು ವಿತರಣೆ ಯೋಜನೆಗೆ ಚಾಲನೆ ನೀಡಿದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು, ಮುಂದಿನ ವರ್ಷದಿಂದ ಪದವಿಪೂರ್ವ ವಿದ್ಯಾರ್ಥಿಗಳಿಗೂ ಮಧ್ಯಾಹ್ನದ ಬಿಸಿಯೂಟ ನೀಡಲು ರಾಜ್ಯ ಚಿಂತನೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.
10ನೇ ತರಗತಿಯವರೆಗಿನ ಮಕ್ಕಳಿಗೆ ಬಿಸಿಯೂಟವನ್ನು ವಿತರಿಸಲಾಗುತ್ತಿದೆ. ಆದರೆ, ಪಿಯು ವಿದ್ಯಾರ್ಥಿಗಳಿಗೂ ಬಿಸಿಯೂಟ ನೀಡಬೇಕೆಂಬ ಬೇಡಿಕೆಗಳು ಬರುತ್ತಿವೆ. ಈ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಪಿಯು ವಿದ್ಯಾರ್ಥಿಗಳಿಗೂ ಬಿಸಿಯೂಟ ವಿಸ್ತರಣೆ ಮಾಡಲಿದ್ದು, ಈ ಕುರಿತಾದ ಸಾಧಕ ಬಾಧಕಗಳ ಬಗ್ಗೆ ಸರ್ಕಾರ ಚರ್ಚೆ ನಡೆಸುತ್ತಿದೆ ಎಂದಿದ್ದಾರೆ.
ಈ ಬಗ್ಗೆ ಸಿಎಂ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಚರ್ಚಿಸಿ ಸದ್ಯದಲ್ಲೇ ಅಂತಿಮ ಸಭೆ ನಡೆಸಿ ಮುಂದಿನ ಶೈಕ್ಷಣಿಕ ವರ್ಷದಿಂದ ಪಿಯು ವಿದ್ಯಾರ್ಥಿಗಳಿಗೂ ಬಿಸಿಯೂಟ ವಿತರಣೆ ಮಾಡುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.