ನವದೆಹಲಿ, ಸೆ.13(Daijiworld News/SS): ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಳ್ಳಲು ಕಾರಣರಾಗಿದ್ದ 17 ಅನರ್ಹ ಶಾಸಕರ ತುರ್ತು ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್ ನಿರಾಕರಿಸಿದೆ.
17 ಮಂದಿ ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರು ತಮ್ಮನ್ನು ಅನರ್ಹಗೊಳಿಸಿದ ಸ್ಪೀಕರ್ ರಮೇಶ್ ಕುಮಾರ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್'ನಲ್ಲಿ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿಗಳಾದ ರಮಣ ಮತ್ತು ಅಜಯ್ ರಸ್ತೋಗಿ ಅವರನ್ನೊಳಗೊಂಡ ದ್ವಿಸದಸ್ಯ ಪೀಠದಲ್ಲಿ ವಿಚಾರಣೆ ನಿಗದಿಯಾಗಿತ್ತು. ಬಳಿಕ ಅನರ್ಹ ಶಾಸಕರ ಅರ್ಜಿ ವಿಚಾರಣೆಗೆ ನಿಗದಿಯಾಗಿದ್ದ ದಿನಾಂಕವನ್ನು ರದ್ದು ಮಾಡಲಾಗಿದೆ.
ನ್ಯಾಯಮೂರ್ತಿ ರಮಣ ನೇತೃತ್ವದ ಪೀಠ ತುರ್ತು ವಿಚಾರಣೆಗೆ ನಿರಾಕರಿಸಿದ್ದು, ತ್ವರಿತ ವಿಚಾರಣೆ ನಡೆಸುವ ಅಗತ್ಯವೇನಿದೆ ಎಂದು ಪ್ರಶ್ನಿಸಿದೆ. ಮಾತ್ರವಲ್ಲ, ನ್ಯಾಯಾಲಯದಲ್ಲಿ ಎಲ್ಲಾ ಪ್ರಕರಣಗಳನ್ನೂ ಸರದಿಯ ಪ್ರಕಾರವೇ ವಿಚಾರಣೆ ನಡೆಸಲಾಗುತ್ತಿದೆ. ನಿಮ್ಮ ಸರದಿ ಬರುವವರೆಗೂ ಕಾಯಬೇಕು. ನೀವು ಹೇಳಿದ ಕೂಡಲೇ ಅರ್ಜಿಯನ್ನು ತುರ್ತು ವಿಚಾರಣೆ ಮಾಡಲು ಸಾಧ್ಯವಿಲ್ಲ ಎಂದು ತಿಳಿಸಿದೆ.