ಹಾಸನ, ಸೆ.20 (DaijiworldNews/AA): ರಾಜ್ಯದಲ್ಲಿ ಉಂಟಾಗಿರುವ ತೀವ್ರ ಬರಪರಿಸ್ಥಿತಿ ಹಾಗೂ ವಿವಾದಾತ್ಮಕ ಕಸ್ತೂರಿ ರಂಗನ್ ವರದಿ ಕುರಿತು ಚರ್ಚಿಸಲು ನಾಳೆಯಿಂದ ಮೂರು ದಿನಗಳ ಕಾಲ ವಿಧಾನಮಂಡಲದ ವಿಶೇಷ ಅಧಿವೇಶನ ಕರೆಯಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ವಿಶೇಷ ಅಧಿವೇಶನದಲ್ಲಿ ಅರಣ್ಯ ಪ್ರದೇಶದ ಪಕ್ಕದಲ್ಲಿ ವಾಸಿಸುವ ಜನರ ಪರಿಸ್ಥಿತಿ ಬಗ್ಗೆ ಸುದೀರ್ಘ ಚರ್ಚೆ ನಡೆಸಿ, ಅತೀ ಶೀಘ್ರವಾಗಿ ಕೇಂದ್ರಕ್ಕೆ ರಾಜ್ಯ ಸರ್ಕಾರದ ನಿರ್ಣಾಯಕ ಅಭಿಪ್ರಾಯವನ್ನು ತಿಳಿಸಲಾಗುವುದು" ಎಂದರು.
"ಈ ಹಿಂದೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ವೇಳೆಯೂ ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಲಾಗಿತ್ತು. ಕಳೆದ ಅಧಿವೇಶನದಲ್ಲೇ ಈ ಕುರಿತು ಚರ್ಚೆ ನಡೆಸಬೇಕಿತ್ತು. ಆದರೆ ವಿರೋಧ ಪಕ್ಷದ ಶಾಸಕರು ತಮ್ಮ ಸ್ವಾರ್ಥ ರಾಜಕಾರಣಕ್ಕಾಗಿ ವಿಧಾನಸಭೆಯ ಅತ್ಯೂಪಯುಕ್ತ ಸಮಯವನ್ನು ವ್ಯರ್ಥ ಮಾಡಿದ್ದಾರೆ" ಎಂದು ವಾಗ್ದಾಳಿ ನಡೆಸಿದರು.
"ಹಾಸನ, ಮೈಸೂರು, ಕೊಡಗು, ಚಿಕ್ಕಮಗಳೂರು, ಕಾರವಾರ ಸೇರಿದಂತೆ ಮಲೆನಾಡು ಭಾಗದ ಸಚಿವರು, ಸಂಸದರು ಹಾಗೂ ಶಾಸಕರ ಜೊತೆ ಚರ್ಚಿಸಿ ಅವರ ಅಭಿಪ್ರಾಯ ಸಂಗ್ರಹಿಸಲಾಗುವುದು. ಕಸ್ತೂರಿ ರಂಗನ್ ವರದಿಯಿಂದ ಜನರ ಬದುಕಿನ ಮೇಲೆ ಬೀರುವ ತೀವ್ರ ಪರಿಣಾಮದ ಬಗ್ಗೆ ಸಮಗ್ರ ವರದಿ ಸಿದ್ಧಪಡಿಸಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುವುದು" ಎಂದು ಸ್ಪಷ್ಟಪಡಿಸಿದರು.