ಬೆಂಗಳೂರು, ಸೆ.24 (DaijiworldNews/TA): ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಕೇಂದ್ರ ಸರ್ಕಾರದಿಂದ ತುರ್ತು ಆರ್ಥಿಕ ನೆರವು ನೀಡುವಂತೆ ಮನವಿ ಮಾಡಿದ್ದಾರೆ.

ರಾಜ್ಯದಲ್ಲಿ ಈಗಾಗಲೇ 177 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಆರಂಭದಲ್ಲಿ 101 ತಾಲ್ಲೂಕುಗಳಿಗೆ ಬರ ಪರಿಹಾರಕ್ಕಾಗಿ ಮನವಿ ಸಲ್ಲಿಸಲಾಗಿತ್ತು. ಬಳಿಕ ವೈಜ್ಞಾನಿಕ ಮೌಲ್ಯಮಾಪನದ ಆಧಾರದ ಮೇಲೆ ಹೆಚ್ಚುವರಿಯಾಗಿ 76 ತಾಲ್ಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರಿಸಲಾಗಿದೆ. ಮುಂದಿನ ದಿನಗಳಲ್ಲಿ ಈ ಸಂಖ್ಯೆ 200ಕ್ಕೂ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.
2026ರ ಖಾರಿಫ್ ಅವಧಿಯ ಬರ ಪರಿಹಾರ ಕ್ರಮಗಳಿಗಾಗಿ ರಾಜ್ಯ ಸರ್ಕಾರ ಈಗಾಗಲೇ ರೂ. 3,705.30 ಕೋಟಿ ಆರ್ಥಿಕ ನೆರವು ಕೋರಿ ಕೇಂದ್ರಕ್ಕೆ ಜ್ಞಾಪಕ ಪತ್ರ ಸಲ್ಲಿಸಿದೆ. ಹೊಸದಾಗಿ ಬರಪೀಡಿತ ಎಂದು ಘೋಷಿಸಲಾದ ತಾಲ್ಲೂಕುಗಳಲ್ಲಿನ ನಷ್ಟ-ಹಾನಿಯ ಮೌಲ್ಯಮಾಪನ ಪೂರ್ಣಗೊಂಡ ಬಳಿಕ ಹೆಚ್ಚುವರಿ ಜ್ಞಾಪಕ ಪತ್ರ ಸಲ್ಲಿಸಲಾಗುವುದು ಎಂದು ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ನೈಋತ್ಯ ಮುಂಗಾರು ಅಂತಿಮ ಹಂತಕ್ಕೆ ಪ್ರವೇಶಿಸುತ್ತಿರುವ ಸಂದರ್ಭದಲ್ಲಿ ರಾಜ್ಯದಲ್ಲಿ ಮಳೆ ಕೊರತೆ ಮುಂದುವರಿದಿದ್ದು, ಇದರ ಪರಿಣಾಮ ಕೃಷಿ, ಜಲಾಶಯಗಳ ನೀರಿನ ಸಂಗ್ರಹ, ಜಾನುವಾರುಗಳಿಗೆ ಮೇವಿನ ಲಭ್ಯತೆ ಹಾಗೂ ಅಂತರ್ಜಲದ ಮೇಲೆ ಪರಿಣಾಮ ಬೀರಿದೆ ಎಂದು ಮುಖ್ಯಮಂತ್ರಿಯವರ ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಮಳೆ ಮತ್ತು ಮಣ್ಣಿನ ತೇವಾಂಶದ ಪರಿಸ್ಥಿತಿ ಹದಗೆಟ್ಟಿರುವ ಹಿನ್ನೆಲೆಯಲ್ಲಿ 40 ಲಕ್ಷ ಹೆಕ್ಟೇರ್ಗೂ ಅಧಿಕ ಪ್ರದೇಶದಲ್ಲಿ ಬೆಳೆ ಹಾನಿಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಸರ್ಕಾರ ಅಂದಾಜಿಸಿದೆ.
ವಿಶೇಷವಾಗಿ ಕಾವೇರಿ ಜಲಾನಯನ ಪ್ರದೇಶದ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕಡಿಮೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಮುಂದಿನ ತಿಂಗಳುಗಳಲ್ಲಿ ಬೆಂಗಳೂರು ಮತ್ತು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಲಭ್ಯತೆಯ ಮೇಲೂ ಪರಿಣಾಮ ಬೀರುವ ಸಾಧ್ಯತೆಯನ್ನು ಮುಖ್ಯಮಂತ್ರಿ ಪತ್ರದಲ್ಲಿ ಪ್ರಸ್ತಾಪಿಸಿದ್ದಾರೆ. ಬರ ಪರಿಸ್ಥಿತಿ ವೇಗವಾಗಿ ಹದಗೆಡುತ್ತಿರುವ ಹಿನ್ನೆಲೆಯಲ್ಲಿ, ಕೇಂದ್ರ ಸರ್ಕಾರದ ನಿಗದಿತ ಮೌಲ್ಯಮಾಪನ ಮತ್ತು ಅನುಮೋದನೆ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಜ್ಞಾಪಕ ಪತ್ರದಲ್ಲಿ ಕೋರಿರುವ ಮೊತ್ತದ ಶೇ.50ರಷ್ಟನ್ನು ಮಧ್ಯಂತರ ಆರ್ಥಿಕ ನೆರವಿನ ರೂಪದಲ್ಲಿ ಬಿಡುಗಡೆ ಮಾಡುವಂತೆ ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ.
ಇದರಿಂದ ಬೆಳೆ ನಷ್ಟಕ್ಕೆ ಪರಿಹಾರ, ಕುಡಿಯುವ ನೀರು ಪೂರೈಕೆ, ಜಾನುವಾರುಗಳ ರಕ್ಷಣೆ ಸೇರಿದಂತೆ ತುರ್ತು ಬರ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ರಾಜ್ಯ ಸರ್ಕಾರಕ್ಕೆ ನೆರವಾಗಲಿದೆ ಎಂದು ಅವರು ತಿಳಿಸಿದ್ದಾರೆ. ಅಲ್ಲದೆ, ರಾಜ್ಯ ವಿಪತ್ತು ನಿರ್ವಹಣಾ ನಿಧಿಯ ಎರಡನೇ ಕಂತಿನ ಕೇಂದ್ರ ಪಾಲನ್ನು ಮುಂಚಿತವಾಗಿ ಬಿಡುಗಡೆ ಮಾಡುವಂತೆಯೂ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮುಖ್ಯಮಂತ್ರಿ ಕೋರಿದ್ದಾರೆ.