ನವದೆಹಲಿ, ಸೆ.24 (DaijiworldNews/AK): ಗ್ರೇಟರ್ ನೋಯ್ಡಾದಲ್ಲಿ ಸ್ಲೀಪರ್ ಬಸ್ಗೆ ಬೆಂಕಿ ಹೊತ್ತಿಕೊಂಡು 9 ಮಂದಿ ಸಜೀವ ದಹನಗೊಂಡ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರ ನೀಡುವುದಾಗಿ ಪ್ರಧಾನಿ ಘೋಷಿಸಿದ್ದಾರೆ.

ಈ ಕುರಿತು ಪ್ರಧಾನಿ ಕಚೇರಿ ಎಕ್ಸ್ನಲ್ಲಿ ಮಾಹಿತಿ ಹಂಚಿಕೊಂಡಿದೆ. ಗ್ರೇಟರ್ ನೋಯ್ಡಾದಲ್ಲಿ ಬಸ್ಗೆ ಬೆಂಕಿ ಹೊತ್ತಿಕೊಂಡು ಜೀವಹಾನಿಯಾಗಿರುವ ಸುದ್ದಿ ದುಃಖ ತಂದಿದೆ. ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸುವುದಾಗಿ ಹಾಗೂ ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ ತಲಾ 50,000 ರೂ. ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ.
ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದ ಯಮುನಾ ಎಕ್ಸ್ಪ್ರೆಸ್ವೇಯಲ್ಲಿ ಚಲಿಸುತ್ತಿದ್ದಾಗಲೇ ಸ್ಲೀಪರ್ ಬಸ್ನಲ್ಲಿ ಭಾರೀ ಬೆಂಕಿ ಹೊತ್ತಿಕೊಂಡ ಪರಿಣಾಮ 9 ಮಂದಿ ಸಜೀವ ದಹನವಾಗಿದ್ದಾರೆ. ಬಸ್ನಲ್ಲಿದ್ದ ಪ್ರಯಾಣಿಕರಲ್ಲಿ ಕೆಲವರು ಪ್ರಾಣ ಉಳಿಸಿಕೊಳ್ಳಲು ಚಲಿಸುತ್ತಿದ್ದ ಬಸ್ನಿಂದಲೇ ಜಿಗಿದಿದ್ದಾರೆ. ಘಟನೆ ವೇಳೆ ಸ್ಲೀಪರ್ ಬಸ್ನಲ್ಲಿ ಸುಮಾರು 40 ರಿಂದ 50 ಮಂದಿ ಪ್ರಯಾಣಿಕರು ಇದ್ದರು.