ಬೆಂಗಳೂರು, ಸೆ.24 (DaijiworldNews/AA): 14 ವರ್ಷಗಳ ಹಿಂದೆ ಧರ್ಮಸ್ಥಳದಲ್ಲಿ ನಡೆದ ವಿದ್ಯಾರ್ಥಿನಿ ಸೌಜನ್ಯ ನಿಗೂಢ ಸಾವು ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ ಹೊರಡಿದೆ. ಇದರ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರ ಸೌಜನ್ಯ ಕೊಲೆ ಕೇಸ್ ತನಿಖೆಗೆ ವಿಶೇಷ ತನಿಖಾ ತಂಡ (ಎಸ್ಐಟಿ) ರಚನೆ ಮಾಡಿ ಆದೇಶ ಹೊರಡಿಸಿದೆ.

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಕುರಿತು ಮರು ತನಿಖೆ ನಡೆಸುವಂತೆ ಸುಪ್ರೀಂ ಆದೇಶ ಹೊರಡಿಸಿದ್ದು, ಮೂರು ತಿಂಗಳಲ್ಲೇ ವರದಿ ನೀಡುವಂತೆ ಸೂಚಿಸಿತ್ತು. ಸುಪ್ರೀಂಕೋರ್ಟ್ ಆದೇಶದ ಬೆನ್ನಲ್ಲೇ ಎನ್.ಶಶಿಕುಮಾರ್ ನೇತೃತ್ವದಲ್ಲಿ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, ಐಪಿಎಸ್ ಅಧಿಕಾರಿಗಳಾದ ನಿಶಾ ಜೇಮ್ಸ್, ಲೋಕೇಶ್ ಜಗಲಸಾರ್, ವೆಂಕಟೇಶ್ ಪ್ರಸನ್ನ ಒಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಿ ಗುರುವಾರ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸೌಜನ್ಯ ನಿಗೂಢ ಸಾವು ಪ್ರಕರಣದ ಮರು ತನಿಖೆ ನಡೆಸುವಂತೆ ಹಾಗೂ 3 ತಿಂಗಳಲ್ಲಿ ತನಿಖೆ ಪೂರ್ಣಗೊಳಿಸಲು ನ್ಯಾ. ಸಂಜಯ್ ಕುಮಾರ್ ಪೀಠ ಡೆಡ್ಲೈನ್ ನೀಡಿದೆ. ಜೊತೆಗೆ ಈ ಹಿಂದೆ ತನಿಖೆ ನಡೆಸಿದ್ದ ಅಧಿಕಾರಿಗಳನ್ನು ತನಿಖೆಗೆ ಸೇರಿಸದಂತೆ ಹೊಸದಾಗಿ ಪ್ರಕರಣದ ತನಿಖೆ ನಡೆಸಬೇಕು. ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಸುಪ್ರೀಂ ಕೋರ್ಟ್ ಕಟ್ಟುನಿಟ್ಟಿನ ಸೂಚನೆ ನೀಡಿದೆ.