ಶಿವಮೊಗ್ಗ, ಸೆ.26 (DaijiworldNews/TA): ದುಬಾರೆ ಆನೆ ಶಿಬಿರದಲ್ಲಿ ನಡೆದ ಆಕಸ್ಮಿಕ ದುರ್ಘಟನೆಯ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಬಂದ್ ಮಾಡಲಾಗಿದ್ದ ಶಿವಮೊಗ್ಗದ ಸಕ್ರೆಬೈಲು ಆನೆ ಬಿಡಾರ ಇದೀಗ ಮತ್ತೆ ಪ್ರವಾಸಿಗರ ಪ್ರವೇಶಕ್ಕೆ ಮುಕ್ತವಾಗಿದೆ. ಇಂದಿನಿಂದ ಸಕ್ರೆಬೈಲು ಆನೆ ಬಿಡಾರದಲ್ಲಿ ಪ್ರವಾಸಿಗರ ವೀಕ್ಷಣೆಗೆ ಅವಕಾಶ ನೀಡಲಾಗಿದ್ದು, ಪುನರಾರಂಭದ ಮೊದಲ ದಿನವೇ 400ಕ್ಕೂ ಹೆಚ್ಚು ಪ್ರವಾಸಿಗರು ಶಿಬಿರಕ್ಕೆ ಭೇಟಿ ನೀಡಿದ್ದಾರೆ. ಪ್ರವಾಸಿಗರ ಸುರಕ್ಷತೆಗೆ ಅರಣ್ಯ ಇಲಾಖೆ ಹಲವು ಹೊಸ ಮಾರ್ಗಸೂಚಿಗಳನ್ನು ಜಾರಿಗೊಳಿಸಿದೆ.

ಹೊಸ ಮಾರ್ಗಸೂಚಿಯಂತೆ ಪ್ರವಾಸಿಗರ ವೀಕ್ಷಣಾ ಪ್ರದೇಶದಲ್ಲಿ ಪ್ರತಿದಿನ 8ರಿಂದ 10 ಆನೆಗಳಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಆನೆಗಳನ್ನು ಮೈತೊಳೆಯುವ ಪ್ರದೇಶಕ್ಕೆ ಪ್ರವಾಸಿಗರ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ಪ್ರವಾಸಿಗರು ಆನೆಗಳನ್ನು ಸುರಕ್ಷಿತ ಅಂತರದಿಂದ ಮಾತ್ರ ವೀಕ್ಷಿಸಲು ಅವಕಾಶ ನೀಡಲಾಗಿದ್ದು, ಸಾರ್ವಜನಿಕರು ಮತ್ತು ಆನೆಗಳ ನಡುವೆ ನೇರ ಸಂಪರ್ಕವಾಗದಂತೆ ಅಗತ್ಯ ವ್ಯವಸ್ಥೆ ಮಾಡಲಾಗಿದೆ.
ಕಳೆದ ಏಪ್ರಿಲ್ 18ರಂದು ದುಬಾರೆ ಆನೆ ಶಿಬಿರದಲ್ಲಿ ನಡೆದ ಆಕಸ್ಮಿಕ ಘಟನೆಯಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದರು. ಈ ಘಟನೆ ಬಳಿಕ ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ರಾಜ್ಯದ ಆನೆ ಶಿಬಿರಗಳನ್ನು ತಾತ್ಕಾಲಿಕವಾಗಿ ಬಂದ್ ಮಾಡುವಂತೆ ಅರಣ್ಯ ಸಚಿವರು ಸೂಚಿಸಿದ್ದರು. ಇದೀಗ ಸುರಕ್ಷತಾ ಕ್ರಮಗಳನ್ನು ಮತ್ತಷ್ಟು ಬಿಗಿಗೊಳಿಸಿ ಸಕ್ರೆಬೈಲು ಆನೆ ಬಿಡಾರವನ್ನು ಪುನರಾರಂಭಿಸಲಾಗಿದೆ. ಶಿಬಿರದಲ್ಲಿ ಪ್ರವಾಸಿಗರು ಹಾಗೂ ಆನೆಗಳ ಸಂಚಾರಕ್ಕೆ ಪ್ರತ್ಯೇಕ ಮಾರ್ಗಗಳನ್ನು ಗುರುತಿಸಲಾಗಿದೆ.
ಅಲ್ಲದೆ, ಪ್ರವಾಸಿಗರಿಗೆ ಅಗತ್ಯ ಮಾಹಿತಿ ನೀಡಲು ಹಾಗೂ ಸುರಕ್ಷತಾ ನಿಯಮಗಳ ಬಗ್ಗೆ ಜಾಗೃತಿ ಮೂಡಿಸಲು ಶಿಬಿರದ ವಿವಿಧೆಡೆ ಸೂಚನಾ ಫಲಕಗಳನ್ನು ಅಳವಡಿಸಲಾಗಿದೆ. ಅರಣ್ಯ ಇಲಾಖೆ ಸೂಚಿಸಿರುವ ನಿಯಮಗಳು ಹಾಗೂ ಮಾರ್ಗಸೂಚಿಗಳನ್ನು ಪ್ರವಾಸಿಗರು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದೆ. ಸಕ್ರೆಬೈಲು ಆನೆ ಬಿಡಾರವು ಶಿವಮೊಗ್ಗದ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾಗಿದೆ. ಆನೆಗಳನ್ನು ವೀಕ್ಷಿಸಲು ಪ್ರತಿನಿತ್ಯ ಇಲ್ಲಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಾರೆ. ಹಲವು ತಿಂಗಳ ಬಳಿಕ ಆನೆ ಬಿಡಾರ ಮತ್ತೆ ಸಾರ್ವಜನಿಕರ ಪ್ರವೇಶಕ್ಕೆ ಮುಕ್ತವಾಗಿರುವುದರಿಂದ ಪ್ರವಾಸಿಗರಲ್ಲಿ ಉತ್ಸಾಹ ಹೆಚ್ಚಾಗಿದೆ ಎಂದು ಶಿವಮೊಗ್ಗ ವನ್ಯಜೀವಿ ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ.