ಕೋಲಾರ, ಸೆ.29 (DaijiworldNews/TA): ಬೆಂಗಳೂರು–ಚೆನ್ನೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಕಾರ್ಪಿಯೋ ಕಾರೊಂದು ಮಧ್ಯರಾತ್ರಿ ನಡು ರಸ್ತೆಯಲ್ಲೇ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಘಟನೆ ಕೋಲಾರದಲ್ಲಿ ನಡೆದಿದೆ.

ಕೋಲಾರ ತಾಲೂಕಿನ ಕೆಂದಟ್ಟಿ ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿ-75ರಲ್ಲಿ ಈ ಘಟನೆ ಸಂಭವಿಸಿದೆ. ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಕಾರು ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದೆ. ಕಾರಿನಲ್ಲಿ ತಾಂತ್ರಿಕ ದೋಷ ಉಂಟಾದ ಹಿನ್ನೆಲೆಯಲ್ಲಿ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.
ಮಾಹಿತಿ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸಿದ್ದಾರೆ. ಆದರೆ ಬೆಂಕಿಯ ತೀವ್ರತೆಗೆ ಸ್ಕಾರ್ಪಿಯೋ ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಘಟನೆ ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪರಿಶೀಲನೆ ನಡೆಸಿದ್ದಾರೆ.