ಬೆಂಗಳೂರು,ಅ.12 (DaijiworldNews/AK): ಕರ್ನಾಟಕದ ನೂತನ ರಾಜ್ಯಪಾಲರಾಗಿ ಹರಿಯಾಣ ಮೂಲದ ಡಾ.ಸುಧಾ ಯಾದವ್ ಅವರನ್ನು ನೇಮಿಸಿ ರಾಷ್ಟ್ರಪತಿಗಳು ಆದೇಶ ಹೊರಡಿಸಿದ್ದಾರೆ.

ಗಡಿಭದ್ರತಾ ಪಡೆಯ ಡೆಪ್ಯುಟಿ ಕಮಾಂಡೆಂಟ್, ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾಗಿರುವ ಯೋಧ ಸುಖ್ಬೀರ್ ಸಿಂಗ್ ಯಾದವ್ ಅವರ ಪತ್ನಿಯಾಗಿರುವ ಸುಧಾ, ಶೈಕ್ಷಣಿಕ ಸಂಶೋಧನೆಯಲ್ಲಿ ಡಾಕ್ಟರೇಟ್ ಪಡೆದಿದ್ದಾರೆ.
1999 ರಿಂದ 2004 ರವರೆಗೆ ಹರಿಯಾಣದ ಮಹೇಂದ್ರಗಢ ಲೋಕಸಭಾ ಕ್ಷೇತ್ರದಿಂದ 13ನೇ ಲೋಕಸಭೆಯ ಸದಸ್ಯೆಯಾಗಿ ಆಯ್ಕೆಯಾಗಿದ್ದರು. ಹಿಂದುಳಿದ ವರ್ಗಗಳ ರಾಷ್ಟ್ರೀಯ ಆಯೋಗದ ಸದಸ್ಯೆಯಾಗಿ ಕಾರ್ಯನಿರ್ವಹಿಸಿದ್ದ ಅವರು ಪ್ರಸ್ತುತ ಬಿಜೆಪಿ ಸಂಸದೀಯ ಮಂಡಳಿ ಸದಸ್ಯೆಯಾಗಿದ್ದಾರೆ.
ಜೊತೆಗೆ, ಸಿಕ್ಕಿಂನ ರಾಜ್ಯಪಾಲರಾದ ಓಂ ಪ್ರಕಾಶ್ ಮಾಥುರ್ ಅವರನ್ನು ಕೇರಳದ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ. ಹಾಗೂ ಕೇರಳದ ರಾಜ್ಯಪಾಲರಾದ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರನ್ನು ತಮಿಳುನಾಡಿನ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದೆ.
ಬ್ರಜ್ ಮೋಹನ್ ರಾಮ್ ಅವರನ್ನು ಒಡಿಶಾದ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ. ಡಾ. ಧಲ್ ಸಿಂಗ್ ಬಿಸೆನ್ ಅವರನ್ನು ಉತ್ತರಾಖಂಡದ ರಾಜ್ಯಪಾಲರನ್ನಾಗಿ ಹಾಗೂ ದುಷ್ಯಂತ್ ಗೌತಮ್ ಅವರನ್ನು ಸಿಕ್ಕಿಂನ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ.