ನವದೆಹಲಿ, ಅ.13 (DaijiworldNews/TA): ಪ್ರಧಾನಿ ನರೇಂದ್ರ ಮೋದಿ ವಿರುದ್ಧದ ‘ಚೌಕಿದಾರ್ ಚೋರ್ ಹೇ’ ಹೇಳಿಕೆಗೆ ಸಂಬಂಧಿಸಿದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರಿಗೆ ಸುಪ್ರೀಂ ಕೋರ್ಟ್ನಿಂದ ಮಹತ್ವದ ರಿಲೀಫ್ ಸಿಕ್ಕಿದೆ.

ಮುಂಬೈ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ಪ್ರಕರಣದ ವಿಚಾರಣಾ ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಬಾಂಬೆ ಹೈಕೋರ್ಟ್ನ ಆದೇಶವನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಿದ ನ್ಯಾಯಾಲಯ ಈ ಆದೇಶ ಹೊರಡಿಸಿದೆ.
ಏನಿದು ಪ್ರಕರಣ? : 2018ರ ಸೆಪ್ಟೆಂಬರ್ 20ರಂದು ರಾಜಸ್ಥಾನದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಹೇಳಿಕೆ ನೀಡಿದ್ದರು ಎಂದು ಆರೋಪಿಸಲಾಗಿದೆ. ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿಯೂ ವಿಡಿಯೋ ಹಂಚಿಕೊಂಡು ಮೋದಿ ಅವರನ್ನು ‘ಹಿಂದುಸ್ತಾನದ ಚೌಕಿದಾರ್ ಕಳ್ಳ’ ಹಾಗೂ ‘ಕಳ್ಳರ ಕಮಾಂಡರ್’ ಎಂದು ಕರೆದಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಹೇಳಿಕೆಗಳಿಗೆ ಸಂಬಂಧಿಸಿದಂತೆ ಬಿಜೆಪಿ ಸದಸ್ಯ ಮಹೇಶ್ ಶ್ರೀಶ್ರೀಮಾಲ್ ಅವರು ಮುಂಬೈನ ಗಿರ್ಗಾಂವ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಖಾಸಗಿ ಕ್ರಿಮಿನಲ್ ಮಾನನಷ್ಟ ದೂರು ದಾಖಲಿಸಿದ್ದರು.
ಈ ಪ್ರಕರಣದಲ್ಲಿ ಮುಂಬೈ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಹೊರಡಿಸಿದ್ದ ಸಮನ್ಸ್ ಹಾಗೂ ವಿಚಾರಣಾ ಪ್ರಕ್ರಿಯೆಯನ್ನು ರದ್ದುಗೊಳಿಸುವಂತೆ ರಾಹುಲ್ ಗಾಂಧಿ ಮನವಿ ಮಾಡಿದ್ದರು. ಆದರೆ, ಬಾಂಬೆ ಹೈಕೋರ್ಟ್ ಸೆಪ್ಟೆಂಬರ್ನಲ್ಲಿ ಅವರ ಮನವಿಯನ್ನು ತಿರಸ್ಕರಿಸಿತ್ತು. ಇದರಿಂದ ಅಸಮಾಧಾನಗೊಂಡ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಪ್ರಕರಣದ ವಿಚಾರಣಾ ಪ್ರಕ್ರಿಯೆಗೆ ತಡೆ ನೀಡಿರುವ ಸುಪ್ರೀಂ ಕೋರ್ಟ್ ಆದೇಶ ಕಾಂಗ್ರೆಸ್ ನಾಯಕನಿಗೆ ತಾತ್ಕಾಲಿಕ ನಿರಾಳತೆ ನೀಡಿದೆ.