ಹುಬ್ಬಳ್ಳಿ, ಅ.13 (DaijiworldNews/TA): ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಹಾಗೂ ಸಕ್ಕರೆಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಹೆಚ್ಚಿಸುವಂತೆ ಆಗ್ರಹಿಸಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಬ್ಬು ಬೆಳೆಗಾರರು ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ಹುಬ್ಬಳ್ಳಿ, ಬೆಳಗಾವಿ, ಮಂಡ್ಯ, ಹಾವೇರಿ, ಕೊಪ್ಪಳ ಮತ್ತು ಧಾರವಾಡ ಸೇರಿದಂತೆ ಹಲವು ಕಡೆ ರೈತರು ರಾಷ್ಟ್ರೀಯ ಹೆದ್ದಾರಿಗಳನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಗಳಿಂದ ಹಲವೆಡೆ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು.

ಸಕ್ಕರೆಗೆ ಎಂಎಸ್ಪಿ ದರವನ್ನು ಪ್ರತಿ ಕೆ.ಜಿ.ಗೆ ರೂ. 60 ಹೆಚ್ಚಿಸಬೇಕು ಹಾಗೂ ಕಬ್ಬಿನ ನ್ಯಾಯಸಮ್ಮತ ಮತ್ತು ಲಾಭದಾಯಕ ಬೆಲೆ (ಎಫ್ಆರ್ಪಿ) ಏರಿಕೆ ಮಾಡಬೇಕು ಎಂಬುದು ರೈತರ ಪ್ರಮುಖ ಬೇಡಿಕೆಯಾಗಿದೆ. ಹುಬ್ಬಳ್ಳಿಯ ಗಬ್ಬೂರು ಬೈಪಾಸ್ ವೃತ್ತದ ಬಳಿ ರೈತರು ಕಲ್ಲು, ಕಟ್ಟಿಗೆ ಹಾಗೂ ಬ್ಯಾರಿಕೇಡ್ಗಳನ್ನು ರಸ್ತೆಗೆ ಅಡ್ಡಲಾಗಿ ಇಟ್ಟು ಪುಣೆ–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯನ್ನು ತಡೆದರು. ಇದರಿಂದ ಹೆದ್ದಾರಿಯಲ್ಲಿ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಯಿತು. ಬೆಳಗಾವಿ ಜಿಲ್ಲೆಯಲ್ಲಿ ಮೂರು ಸ್ಥಳಗಳಲ್ಲಿ ಕಬ್ಬು ಬೆಳೆಗಾರರು ರಾಷ್ಟ್ರೀಯ ಹೆದ್ದಾರಿಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಿದರು. ಹಿರೇಬಾಗೇವಾಡಿ ಟೋಲ್ ಬಳಿ ರೈತರು ಹೆದ್ದಾರಿಯಲ್ಲಿ ಉರುಳು ಸೇವೆ ನಡೆಸಿ, ಕೈಯಲ್ಲಿ ಪೊರಕೆ ಹಿಡಿದು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ರೈತ ಮುಖಂಡ ಶಶಿಕಾಂತ ಗುರೂಜಿ ನೇತೃತ್ವದಲ್ಲಿ ನೂರಾರು ರೈತರು ಟೋಲ್ ಗೇಟ್ ಬಂದ್ ಮಾಡಿ, ಹಸಿರು ಶಾಲು ಬೀಸುತ್ತಾ ಧರಣಿ ನಡೆಸಿದರು. ಎತ್ತು ಹಾಗೂ ಎತ್ತಿನ ಬಂಡಿಗಳನ್ನು ರಸ್ತೆಗೆ ಅಡ್ಡಲಾಗಿ ನಿಲ್ಲಿಸಿ, ಬಾರಕೋಲು ಬೀಸುವ ಮೂಲಕವೂ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ, ಹುಕ್ಕೇರಿ ತಾಲೂಕಿನ ಹತ್ತರಗಿ ಟೋಲ್ ಬಳಿ ರೈತ ಮುಖಂಡರು ಪುಣೆ–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯನ್ನು ತಡೆದು, ವಾಹನಗಳ ಮುಂದೆ ಮಲಗಿ ಪ್ರತಿಭಟನೆ ನಡೆಸಿದರು. ಸಕ್ಕರೆ ನಾಡು ಮಂಡ್ಯದಲ್ಲೂ ಕಬ್ಬು ಬೆಳೆಗಾರರ ಪ್ರತಿಭಟನೆ ತೀವ್ರಗೊಂಡಿತು. ನಗರದ ಸಂಜಯ್ ವೃತ್ತದಲ್ಲಿ ಹಳೆಯ ಬೆಂಗಳೂರು–ಮೈಸೂರು ಹೆದ್ದಾರಿಯನ್ನು ತಡೆದ ರಾಜ್ಯ ರೈತ ಸಂಘ ಮತ್ತು ಕನ್ನಡ ಸೇನೆಯ ಕಾರ್ಯಕರ್ತರು, ರಸ್ತೆಯ ಮಧ್ಯೆ ಕುಳಿತು ಧರಣಿ ನಡೆಸಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆಗಳನ್ನು ಕೂಗಿ, ಕಬ್ಬಿಗೆ ಸೂಕ್ತ ಬೆಲೆ ನಿಗದಿಪಡಿಸುವಂತೆ ಒತ್ತಾಯಿಸಿದರು.
ಹಾವೇರಿ ಜಿಲ್ಲೆಯ ಬಂಕಾಪುರ ಟೋಲ್ ಗೇಟ್ ಬಳಿ ರೈತರು ಪ್ರತಿಭಟನೆ ನಡೆಸಿದರು. ಕೊಪ್ಪಳದ ಹಿಟ್ನಾಳ್ ಟೋಲ್ ಗೇಟ್ ಬಳಿ ಭಾರತೀಯ ಕ್ರಾಂತಿಕಾರಿ ಕಿಸಾನ್ ಸೇನಾ ರೈತ ಸಂಘದ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ರೈತರು ತಲೆಯ ಮೇಲೆ ಕಲ್ಲು ಹೊತ್ತುಕೊಂಡು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಧಾರವಾಡ ತಾಲೂಕಿನ ತೇಗೂರು ಬಳಿ ರಾಷ್ಟ್ರೀಯ ಹೆದ್ದಾರಿ-4 ಅನ್ನು ಬಂದ್ ಮಾಡಿದ ರೈತರು, ಕಬ್ಬಿಗೆ ಶೀಘ್ರ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿದರು. ಧಾರವಾಡ ಹೊರವಲಯದ ಯರಿಕೊಪ್ಪ ಬಳಿಯೂ ಹೆದ್ದಾರಿ ತಡೆ ನಡೆಸಲಾಯಿತು. ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ವಿವಿಧೆಡೆ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿತ್ತು.
ಹುಬ್ಬಳ್ಳಿಯಲ್ಲಿ ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ನಿವಾಸದ ಬಳಿ ಹೆಚ್ಚುವರಿ ಪೊಲೀಸ್ ಭದ್ರತೆ ಒದಗಿಸಲಾಗಿತ್ತು. ಈ ನಡುವೆ, ಕಬ್ಬಿನ ಬೆಲೆ ನಿಗದಿಗೆ ಆಗ್ರಹಿಸಿ ನಡೆಯುತ್ತಿರುವ ಹೆದ್ದಾರಿ ತಡೆ ಪ್ರತಿಭಟನೆಗಳನ್ನು ಕೈಬಿಟ್ಟು ಮಾತುಕತೆಗೆ ಮುಂದಾಗುವಂತೆ ಜೋಶಿ ರೈತರಲ್ಲಿ ಮನವಿ ಮಾಡಿದರು. ಸರ್ಕಾರ ರೈತರ ಪರವಾಗಿದ್ದು, ಉದ್ವೇಗಕ್ಕೆ ಒಳಗಾಗದೆ ಪ್ರತಿಭಟನೆಯನ್ನು ಕೈಬಿಡಬೇಕು ಎಂದು ಅವರು ವಿನಂತಿಸಿದರು. ರಾಜ್ಯ ಆಡಳಿತ ಬೆಲೆ (ಎಸ್ಎಪಿ) ನಿಗದಿ, ಕಬ್ಬಿನ ತೂಕದಲ್ಲಿ ಆಗುತ್ತಿರುವ ಮೋಸ ಹಾಗೂ ರಿಕವರಿ ದರಕ್ಕೆ ಸಂಬಂಧಿಸಿದ ಸಮಸ್ಯೆಗಳ ಕುರಿತು ರಾಜ್ಯ ಸರ್ಕಾರದ ಸಚಿವರೊಂದಿಗೆ ಚರ್ಚಿಸಲಾಗಿದೆ ಎಂದು ಜೋಶಿ ತಿಳಿಸಿದರು.
ಎಥೆನಾಲ್ ಮಿಶ್ರಣದ ಪ್ರಮಾಣವನ್ನು ಶೇ. 1.5ರಿಂದ ಶೇ. 20ಕ್ಕೆ ಹೆಚ್ಚಿಸಲಾಗಿದೆ ಎಂದು ಉಲ್ಲೇಖಿಸಿದ ಅವರು, ರೈತರ ಹಿತರಕ್ಷಣೆಗೆ ಸರ್ಕಾರ ಬದ್ಧವಾಗಿದೆ ಎಂದರು. ಹೆದ್ದಾರಿ ತಡೆ ನಡೆಸುವ ಬದಲು ಮಾತುಕತೆಯ ಮೂಲಕ ಸಮಸ್ಯೆಗಳನ್ನು ಆದಷ್ಟು ಬೇಗ ಪರಿಹರಿಸಿಕೊಳ್ಳೋಣ ಎಂದು ರೈತರಲ್ಲಿ ಮನವಿ ಮಾಡಿದರು. ಕಬ್ಬಿಗೆ ಸೂಕ್ತ ಬೆಲೆ ನಿಗದಿ ಹಾಗೂ ಸಕ್ಕರೆ ಬೆಲೆ ಹೆಚ್ಚಳದ ಬೇಡಿಕೆ ಮುಂದಿಟ್ಟುಕೊಂಡು ರೈತರು ಪ್ರತಿಭಟನೆ ತೀವ್ರಗೊಳಿಸಿರುವ ಹಿನ್ನೆಲೆಯಲ್ಲಿ, ಸರ್ಕಾರದ ಮುಂದಿನ ಕ್ರಮಗಳ ಬಗ್ಗೆ ಕುತೂಹಲ ಮೂಡಿದೆ.