ಬೆಂಗಳೂರು, ಅ.13 (DaijiworldNews/AK): ರಾಜ್ಯದಲ್ಲಿ ಬರವಿದೆ. ಜಾನುವಾರು ಹಾಗೂ ಜನರಿಗೆ ತೊಂದರೆಯಾಗಿದೆ. ಇದರ ಬಗ್ಗೆ ಸಚಿವರು, ಶಾಸಕರು ಗಮನಹರಿಸಬೇಕು. ಇದೆಲ್ಲ ಮಾಡದೆ ಈಗ ಸ್ಟಿಂಗ್ ಆಪರೇಷನ್ ಬಗ್ಗೆಯೇ ಚರ್ಚೆ ಆಗುತ್ತಿರುವುದು ರಾಜಕಾರಣದ ದುರದೃಷ್ಟ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಆಕ್ಷೇಪಿಸಿದರು.

ಮಲ್ಲೇಶ್ವರದ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಹಣ ಐದು ಸಾವಿರ ಕೋಟಿ ಬಿಡುಗಡೆ ಮಾಡಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಬೇಕಿತ್ತು. ನಾವೂ ರಾಜ್ಯ ಸರ್ಕಾರದ ಬೆಂಬಲಕ್ಕೆ ನಿಲ್ಲುತ್ತಿದ್ದೆವು. ಬರ ಮತ್ತು ಕಾನೂನು ಸುವ್ಯವಸ್ಥೆಗೆ ಒಟ್ಟಾಗಿ ಕೆಲಸ ಮಾಡುವ ಬದಲು ಸ್ಟಿಂಗ್ ಆಪರೇಷನ್ ಬಗ್ಗೆ ಯೋಚಿಸುತ್ತಿದೆ. ಮಾಜಿ ಸಿಎಂ ನ್ಯಾಯಾಲಯದ ಮೊರೆ ಹೋಗಿರುವುದು ರಾಜಕಾರಣ ಇಷ್ಟು ಕೀಳು ಮಟ್ಟಕ್ಕೆ ಹೋಗಿರುವುದರ ಸೂಚನೆ. ಇನ್ನಾದರೂ ರಾಜ್ಯ ಸರ್ಕಾರ ಇಂತಹ ಗೊಂದಲಗಳಿಗೆ ಅವಕಾಶ ನೀಡದೆ ಬರದ ಬಗ್ಗೆ ಗಮನ ಹರಿಸಲಿ ಎಂದು ಆಗ್ರಹಿಸಿದರು.
ಎಸ್ಐಆರ್ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ಮತ್ತು ರಾಹುಲ್ ಗಾಂಧಿ ಅವರಿಗೆ ಸ್ಪಷ್ಟತೆಯೇ ಇಲ್ಲ. ಎಲ್ಲವನ್ನೂ ಗೊಂದಲ ಮಾಡಿಕೊಂಡು ಸಂವಿಧಾನಬದ್ಧವಾಗಿ ಕೆಲಸ ಮಾಡುವ ಸಂಸ್ಥೆಗಳಿಗೆ ತೊಡಕುಂಟು ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ಎಸ್ಐಆರ್ ವಿಚಾರದಲ್ಲಿ ರಾಹುಲ್ ಗಾಂಧಿ ಅವರು ಗೊಂದಲದ ಗೂಡಾಗಿದ್ದಾರೆ. ಸುಪ್ರೀಂ ಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ಬಿಜೆಪಿ ವಕ್ತಾರರಂತೆ ಕೆಲಸ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷರು ಹೇಳುತ್ತಾರೆ. ಮತ್ತೊಂದು ಕಡೆ ಕೇರಳ ಕಾಂಗ್ರೆಸ್ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ಬಗ್ಗೆ ಟೀಕೆ ಮಾಡಿದೆ. ಈ ರೀತಿ ಹೇಳುವ ಇವರೇ ಸುಪ್ರೀಂ ಕೋರ್ಟ್ನಲ್ಲಿ ಎಸ್ಐಆರ್ಗೆ ಮನವಿ ಕೊಡುವ ಮಾತನಾಡುತ್ತಾರೆ. ಇದೆಲ್ಲ ಇವರ ಗೊಂದಲದ ಮನಸ್ಥಿತಿ. ಸಂವಿಧಾನ ಉಳಿಸುತ್ತೇವೆ ಎನ್ನುವ ಇವರೇ ಮತ್ತೊಂದು ಕಡೆ ನ್ಯಾಯಾಂಗ ನಿಂದನೆ ಮಾಡುತ್ತಾರೆ. ಸುಪ್ರೀಂ ಕೋರ್ಟ್ ಅನ್ನೇ ಅವಹೇಳನ ಮಾಡುತ್ತಾರೆ ಎಂದು ದೂರಿದರು.
ವಿನಾಕಾರಣ ಕೇಂದ್ರ ಸರ್ಕಾರವನ್ನು ದೂಷಣೆ ಮಾಡುತ್ತಾರೆ. ಕೇಂದ್ರ ಸರ್ಕಾರದ ಕೆಲಸಕ್ಕೆ ತಡೆ ಮಾಡಿರುವ ಕಾಂಗ್ರೆಸ್ ವಿರೋಧ ಪಕ್ಷವಾಗಿ ಸಂಪೂರ್ಣವಾಗಿ ವಿಫಲವಾಗಿದೆ. ಇನ್ನಾದರೂ ಕಾಂಗ್ರೆಸ್ ಎಲ್ಲದರ ಬಗ್ಗೆ ವಿಮರ್ಶೆ ಮಾಡಿಕೊಳ್ಳಬೇಕು. ಜನರನ್ನು ತಪ್ಪುದಾರಿಗೆ ಎಳೆಯುವ ರೀತಿ ಬಾಲಿಶವಾಗಿ ನಡೆದುಕೊಳ್ಳಬಾರದು ಎಂದು ಆಗ್ರಹಿಸಿದರು.
ಮೀಸಲಾತಿ ಉಳಿಯಲು ರಾಜ್ಯ ಸರ್ಕಾರ ಕೆಲಸ ಮಾಡಲಿ
ಎಸ್ಸಿ ಮತ್ತು ಎಸ್ಟಿ ಮೀಸಲಾತಿಗೆ ಹೈಕೋರ್ಟ್ ತಡೆ ನೀಡಿರುವುದನ್ನು ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ನಲ್ಲಿ ಪ್ರಶ್ನಿಸಬೇಕು. ಅಲ್ಲಿ ಸರಿಯಾದ ವಾದ ಮಂಡನೆ ಮಾಡಬೇಕು ಎಂದು ಒತ್ತಾಯಿಸಿದರು.
ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ವರದಿ ಆಧಾರದಲ್ಲಿ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಗಳಾಗಿದ್ದ ವೇಳೆ ಮೀಸಲಾತಿ ಹೆಚ್ಚಿಸಿದ್ದೆವು. ಪರಿಶಿಷ್ಟ ಜಾತಿ ಮತ್ತು ಪಂಗಡದ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಿಸಿದ್ದೆವು. ಅದನ್ನು ಹೈಕೋರ್ಟ್ನಲ್ಲಿ ಪ್ರಶ್ನಿಸಿದರು. ಇದಕ್ಕೆ ಸರ್ಕಾರದ ಪರವಾಗಿ ಸಮರ್ಥವಾಗಿ ವಾದ ಮಂಡನೆ ಮಾಡಬೇಕು ಎಂದೂ ಆಗ್ರಹಿಸಿದ್ದೆವು. ಆದರೆ ಸರ್ಕಾರ ಸರಿಯಾಗಿ ವಾದ ಮಂಡನೆ ಮಾಡಲಿಲ್ಲ ಎಂದು ದೂರಿದರು.
ಸುಪ್ರೀಂ ಕೋರ್ಟ್ನಲ್ಲಿ ಸರಿಯಾದ ವಾದ ಮಂಡನೆ ಮಾಡಿದರೆ ಮೀಸಲಾತಿ ಉಳಿಯಲಿದೆ. ಈ ನಿಟ್ಟಿನಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಕೆಲಸ ಮಾಡಲಿ ಎಂದು ಹೇಳಿದರು.