ಪಾಟ್ನಾ, ಅ.14 (DaijiworldNews/AA): ಬಿಹಾರದ ವೈಶಾಲಿ ಜಿಲ್ಲೆಯಲ್ಲಿ ಸುಮಾರು 15 ರಿಂದ 20 ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ದೋಣಿ ಮಗುಚಿಬಿದ್ದ ಪರಿಣಾಮ 13 ಮಕ್ಕಳು ಮೃತಪಟ್ಟಿರುವ ಘಟನೆ ಮಂಗಳವಾರ ರಾತ್ರಿ ಸಂಭವಿಸಿದೆ. ಮೃತರ ಕುಟುಂಬಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಒಟ್ಟು 6 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ.

ಮಂಗಳವಾರ ರಾತ್ರಿ ಸುಮಾರು 8:30ರ ವೇಳೆಗೆ ಮಕ್ಕಳು ಪಕ್ಕದ ಹಳ್ಳಿಯಲ್ಲಿ ನಡೆಯುತ್ತಿದ್ದ ಹಬ್ಬದಲ್ಲಿ ಭಾಗವಹಿಸಲು ದೋಣಿಯಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ದೋಣಿ ಮಗುಚಿಬಿದ್ದಿದೆ.
ತಕ್ಷಣವೇ ವಿಪತ್ತು ನಿರ್ವಹಣಾ ತಂಡಗಳು ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದು, ಈವರೆಗೆ ಏಳು ಜನರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತಪಟ್ಟ 13 ಮಕ್ಕಳೂ 15 ವರ್ಷ ಅಥವಾ ಅದಕ್ಕಿಂತ ಕಡಿಮೆ ವಯಸ್ಸಿನವರು ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ತಿಳಿಸಿದ್ದಾರೆ.
ಈ ಅವಘಡದಲ್ಲಿ ಮೃತಪಟ್ಟವರಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಮೃತರ ಹತ್ತಿರದ ಸಂಬಂಧಿಕರಿಗೆ ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ. ಪರಿಹಾರ ನೀಡಲಾಗುತ್ತದೆ. ಜೊತೆಗೆ ಗಾಯಾಳುಗಳಿಗೆ ತಲಾ 50,000 ರೂ. ಆರ್ಥಿಕ ನೆರವು ನೀಡುವುದಾಗಿ ಘೋಷಿಸಿದ್ದಾರೆ. ಬಿಹಾರದ ಸಿಎಂ ಸಾಮ್ರಾಟ್ ಚೌಧರಿ ಕೂಡ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 4 ಲಕ್ಷ ರೂ. ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ.