ನವದೆಹಲಿ, ನ.25 (DaijiworldNews/AA): ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ತನಿಖೆ ನಡೆಸುವಂತೆ ಅಲಹಾಬಾದ್ ಹೈಕೋರ್ಟ್ ನೀಡಿದ್ದ ಸೂಚನೆಯನ್ನು ಸುಪ್ರೀಂಕೋರ್ಟ್ ರದ್ದು ಮಾಡಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿಗಳಾದ ಜಾಯ್ಮಲ್ಯ ಬಾಗ್ಚಿ ಹಾಗೂ ವಿ. ಮೊಹನಾ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ಈ ಆದೇಶ ನೀಡಿದೆ. ಪ್ರಕರಣವನ್ನು ಮರುಪರಿಶೀಲನೆಗಾಗಿ ಅಲಹಾಬಾದ್ ಹೈಕೋರ್ಟ್ಗೆ ಮರಳಿಸಿರುವ ನ್ಯಾಯಪೀಠ, ಅರ್ಜಿಯ ವಿಚಾರಣೆಯನ್ನು ಹೊಸದಾಗಿ ನಡೆಸುವಂತೆ ಸೂಚಿಸಿದ್ದು, ರಾಹುಲ್ ಗಾಂಧಿಗೆ ಬಿಗ್ ರಿಲೀಫ್ ಸಿಕ್ಕಿದಂತಾಗಿದೆ.
ಕರ್ನಾಟಕದ ಬಿಜೆಪಿ ಕಾರ್ಯಕರ್ತ ಎಸ್. ವಿಘ್ನೇಶ್ ಶಿಶಿರ್ ಅವರು ರಾಹುಲ್ ಗಾಂಧಿ ವಿರುದ್ಧ ದೂರು ಸಲ್ಲಿಸಿದ್ದರು. ರಾಹುಲ್ ಗಾಂಧಿ ತಮ್ಮ ಆದಾಯದ ಮೂಲಗಳಿಗೆ ಹೋಲಿಸಿದರೆ ಅಕ್ರಮವಾಗಿ ಹೆಚ್ಚಿನ ಆಸ್ತಿ ಹೊಂದಿದ್ದಾರೆ ಎಂದು ಅವರು ಆರೋಪಿಸಿದ್ದರು. ಈ ಆರೋಪಗಳ ಕುರಿತು ತನಿಖೆ ನಡೆಸುವಂತೆ ಸಿಬಿಐ ಮತ್ತು ಇ.ಡಿ.ಗೆ ನಿರ್ದೇಶನ ನೀಡಬೇಕೆಂದು ಅವರು ನ್ಯಾಯಾಲಯದ ಮೆಟ್ಟಿಲೇರಿದ್ದರು.
ಈ ಅರ್ಜಿಯ ವಿಚಾರಣೆ ನಡೆಸಿದ್ದ ಅಲಹಾಬಾದ್ ಹೈಕೋರ್ಟ್, ಆರೋಪಗಳನ್ನು ಕಾನೂನಿನ ಪ್ರಕಾರ ಪರಿಶೀಲಿಸುವಂತೆ ಸಿಬಿಐ ಮತ್ತು ಇಡಿಗೆ ಸೂಚಿಸಿತ್ತು. ಅಲ್ಲದೆ, ತನಿಖೆಯ ಪ್ರಗತಿ ಕುರಿತು ನ್ಯಾಯಾಲಯಕ್ಕೆ ಮಾಹಿತಿ ನೀಡುವಂತೆಯೂ ತಿಳಿಸಿತ್ತು. ಬಳಿಕ ಸಿಬಿಐ ಸಲ್ಲಿಸಿದ್ದ ಅಫಿಡವಿಟ್ಗೆ ಅಸಮಾಧಾನ ವ್ಯಕ್ತಪಡಿಸಿದ್ದ ಹೈಕೋರ್ಟ್, ಹೊಸ ಅಫಿಡವಿಟ್ ಸಲ್ಲಿಸುವಂತೆ ನಿರ್ದೇಶಿಸಿತ್ತು.
ಹೈಕೋರ್ಟ್ನ ಈ ಆದೇಶಗಳನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಆಗಸ್ಟ್ 17ರಂದು ಅರ್ಜಿಯ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್, ಅಲಹಾಬಾದ್ ಹೈಕೋರ್ಟ್ನ ವಿಚಾರಣೆಗೆ ತಾತ್ಕಾಲಿಕ ತಡೆ ನೀಡಿದೆ. ಜೊತೆಗೆ ಸಿಬಿಐ ಮತ್ತು ಇಡಿ ಹೈಕೋರ್ಟ್ಗೆ ತನಿಖಾ ವರದಿ ಸಲ್ಲಿಸಬಾರದು ಎಂದು ಸೂಚನೆ ನೀಡಿತ್ತು.
ಇದೀಗ ಹೈಕೋರ್ಟ್ನ ಹಿಂದಿನ ನಿರ್ದೇಶನಗಳನ್ನು ರದ್ದುಗೊಳಿಸಿರುವ ಸುಪ್ರೀಂಕೋರ್ಟ್, ಪ್ರಕರಣವನ್ನು ಹೊಸದಾಗಿ ವಿಚಾರಣೆ ನಡೆಸುವಂತೆ ತಿಳಿಸಿದೆ. ಅರ್ಜಿಯ ವಿಚಾರಣೆಯಲ್ಲಿ ರಾಹುಲ್ ಗಾಂಧಿ ಅವರನ್ನೂ ಪಕ್ಷಕಾರರನ್ನಾಗಿ ಸೇರಿಸಿಕೊಂಡು, ಅವರ ವಾದ ಆಲಿಸಿದ ಬಳಿಕವೇ ಮುಂದಿನ ಆದೇಶ ನೀಡಬೇಕು ಎಂದು ಹೇಳಿದೆ.