ಕಲಬುರಗಿ,ನ.25 (DaijiworldNews/AK): ಪ್ರಜಾಪ್ರಭುತ್ವವನ್ನು ಉಳಿಸಿ, ಅರಾಜಕತೆಯನ್ನು ಅಳಿಸಿ ಎಂಬ ಘೋಷವಾಕ್ಯದೊಂದಿಗೆ ಬಿಜೆಪಿ ದೇಶಾದ್ಯಂತ ಜನಾಂದೋಲನವನ್ನು ಹಮ್ಮಿಕೊಂಡಿದೆ. ಕಾಂಗ್ರೆಸ್ ಪಕ್ಷವು ಎಸ್ಐಆರ್ ವಿಚಾರದಲ್ಲಿ ಜನರಲ್ಲಿ ಅನಗತ್ಯ ಗೊಂದಲ ಸೃಷ್ಟಿಸುವ ಮೂಲಕ ಅಪಪ್ರಚಾರ ನಡೆಸುತ್ತಿದೆ. ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ ಮತ್ತು ಚುನಾವಣಾ ಪ್ರಕ್ರಿಯೆಯ ಬಗ್ಗೆ ಜನರಲ್ಲಿ ಅಪನಂಬಿಕೆ ಮೂಡಿಸುವ ಪ್ರಯತ್ನವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ವಾಗ್ದಾಳಿ ನಡೆಸಿದರು.

ಕಲಬುರಗಿಯಲ್ಲಿ ಹಮ್ಮಿಕೊಂಡಿದ್ದ ಪ್ರಜಾಪ್ರಭುತ್ವವನ್ನು ಉಳಿಸಿ, ಅರಾಜಕತೆಯನ್ನು ಅಳಿಸಿ ಪಾದಯಾತ್ರೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಿಂದುಳಿದ ವರ್ಗದ ನಾಯಕ ನರೇಂದ್ರ ಮೋದಿಯವರು ದೇಶದ ಚುಕ್ಕಾಣಿ ಹಿಡಿದು ಭಾರತವನ್ನು ಅಭಿವೃದ್ಧಿಯ ಪಥದಲ್ಲಿ ಮುನ್ನಡೆಸುತ್ತಿರುವುದನ್ನು ಕಾಂಗ್ರೆಸ್ ನಾಯಕರಿಗೆ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ದೇಶದ ಅಭಿವೃದ್ಧಿ, ಪ್ರಗತಿ ಮತ್ತು ಜಾಗತಿಕ ಮಟ್ಟದಲ್ಲಿ ಭಾರತದ ಹೆಚ್ಚುತ್ತಿರುವ ಗೌರವವನ್ನು ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿಯವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ ಎಂದರು.
ರಾಹುಲ್ ಗಾಂಧಿಯವರು ಒಂದು ರೀತಿಯಲ್ಲಿ ಎನ್ಆರ್ಐ (NRI) ಆಗಿದ್ದಾರೆ. ವಿದೇಶಗಳಿಗೆ ತೆರಳಿ ಭಾರತದ ಬಗ್ಗೆ ಅಪಮಾನಕರವಾಗಿ ಮಾತನಾಡುವುದೇ ಅವರ ಕೆಲಸವಾಗಿದೆ. ಪ್ರಧಾನಿಯಾಗಬೇಕೆಂಬ ಹಗಲುಗನಸನ್ನು ಕಾಣುತ್ತಿರುವ ರಾಹುಲ್ ಗಾಂಧಿಯವರಿಗೆ ಅದು ಎಂದಿಗೂ ಸಾಧ್ಯವಾಗುವುದಿಲ್ಲ. ಮುಂದಿನ ಬಾರಿಯೂ ನರೇಂದ್ರ ಮೋದಿಯವರೇ ದೇಶದ ಪ್ರಧಾನಿಯಾಗಲಿದ್ದಾರೆ. ಮೋದಿ ಎಲ್ಲಿಗೂ ಹೋಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ದೇಶದಲ್ಲಿ ದಂಗೆ ಎಬ್ಬಿಸುವ ಮತ್ತು ಅರಾಜಕತೆಯ ವಾತಾವರಣ ಸೃಷ್ಟಿಸುವ ಕುತಂತ್ರವನ್ನು ಕಾಂಗ್ರೆಸ್ ಮಾಡುತ್ತಿದೆ. ಆದರೆ ದೇಶದ ಜನರು ನರೇಂದ್ರ ಮೋದಿಯವರ ನಾಯಕತ್ವದ ಮೇಲೆ ಅಪಾರ ವಿಶ್ವಾಸವಿಟ್ಟಿದ್ದಾರೆ. ಪ್ರಧಾನಿ ಮೋದಿ ಅವರ ಕುರಿತು ಮಲ್ಲಿಕಾರ್ಜುನ ಖರ್ಗೆಯವರು ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ವಿಜಯೇಂದ್ರ ಅವರು, ಖರ್ಗೆಯವರು 'ಮೋದಿ ಬೀ ಜಾಯೇಗಾ, ಮೋದಿ ಕೀ ಭಾಪ್ ಬಿ ಜಾಯೇಗಾ' ಎಂದು ಹೇಳಿದ್ದಾರೆ. ಆದರೆ ಮೋದಿ ಎಲ್ಲಿಗೂ ಹೋಗುವುದಿಲ್ಲ; ದೇಶದ ಜನರ ಆಶೀರ್ವಾದ ಅವರೊಂದಿಗಿದೆ ಎಂದರು.