ಬೆಂಗಳೂರು, ಮಾ. 19 (DaijiworldNews/SM): ರಾಜ್ಯದಲ್ಲಿ ಸಿನಿಮಾ ಮಂದಿರಗಳಲ್ಲಿ ಶೇ. 50ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡುವ ಯಾವ ಪ್ರಸ್ತಾಪವೂ ಸರ್ಕಾರದ ಮುಂದಿಲ್ಲ. ಪ್ರೇಕ್ಷಕರು ಮತ್ತು ಥಿಯೇಟರ್ ಮಾಲೀಕರು ಎಲ್ಲಾ ಆವಶ್ಯಕ ಮುಂಜಾಗ್ರತಾ ಕ್ರಮಗಳನ್ನು ತಪ್ಪದೇ ಪಾಲಿಸಿ, ಕೊರೋನಾ ನಿಯಂತ್ರಣಕ್ಕೆ ಸರ್ಕಾರದೊಂದಿಗೆ ಸಹಕರಿಸಬೇಕು ಎಂಬು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ಕೊರೋನಾ ಕಾರಣದಿಂದಾಗಿ ಕಳೆದ ಒಂದು ವರ್ಷದಿಂದ ಚಿತ್ರಮಂದಿರಗಳಿಗೆ ಬೀಗ ಜಡಿಯಲಾಗಿತ್ತು. ಹಲವು ಸಮಯದ ಬಳಿಕ ಇತ್ತೀಚಿಗಷ್ಟೇ ಚಿತ್ರಮಂದಿರಗಳತ್ತ ಪ್ರೇಕ್ಷಕರು ಬರುತ್ತಿದ್ದಾರೆ. ಇದರ ಬೆನ್ನಲ್ಲೇ ಸೀಮಿತ ಆಸನಕ್ಕೆ ಮತ್ತೆ ಅವಕಾಶ ನೀಡಿದರೆ ಚಿತ್ರ ನಿರ್ಮಾಪಕರು, ನಟರು ಮತ್ತು ಕಾರ್ಮಿಕರು ಸಂಕಷ್ಟಕ್ಕೆ ಸಿಲುಕುತ್ತಾರೆ ಎಂಬ ಮಾತುಗಳು ಸ್ಯಾಂಡಲ್ ವುಡ್ ನಿಂದ ಕೇಳಿ ಬಂದಿತ್ತು. ಅಲ್ಲದೆ, ಚಿತ್ರಮಂದಿರಗಳಲ್ಲಿ ಶೇ.50ರಷ್ಟು ಆಸನ ಭರ್ತಿ ಆದೇಶ ಮಾಡಬಾರದು ಎಂದು ಸ್ಯಾಂಡಲ್ ವುಡ್ ಆಗ್ರಹಿಸಿದೆ.
ಈ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು, ರಾಜ್ಯದಲ್ಲಿ ಸಿನಿಮಾ ಮಂದಿರಗಳಲ್ಲಿ ಶೇ. 50ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡುವ ಯಾವ ಪ್ರಸ್ತಾಪವೂ ಸರ್ಕಾರದ ಮುಂದಿಲ್ಲ ಎಂದಿದೆ.