ನವದೆಹಲಿ, ಜು. 06 (DaijiworldNews/SM): ರಾಜ್ಯದಲ್ಲಿ ಹೆಚ್ಚಿನ ಲಸಿಕೆ ಬೇಡಿಕೆ ಇದ್ದು, ಬೇಡಿಕೆಗನುಗುಣವಾಗಿ ಹೆಚ್ಚಿನ ಪ್ರಮಾಣದಲ್ಲಿ ಲಸಿಕೆ ಪೂರೈಸಬೇಕೆಂದು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಅವರನ್ನು ರಾಜ್ಯ ಸಚಿವ ಸುಧಾಕರ್ ಮನವಿ ಮಾಡಿಕೊಂಡಿದ್ದಾರೆ.

ಕೇಂದ್ರ ಆರೋಗ್ಯ ಸಚಿವರನ್ನು ಭೇಟಿಯಾಗಿರುವ ಸಚಿವ ಡಾ. ಸುಧಾಕರ್, ರಾಜ್ಯಕ್ಕೆ ತಿಂಗಳಿಗೆ 1.5 ಕೋಟಿ ಡೋಸ್ ಕೋವಿಡ್ ಲಸಿಕೆ ಪೂರೈಸುವಂತೆ ಮನವಿ ಮಾಡಿದ್ದಾರೆ. ಅಲ್ಲದೆ, ರಾಜ್ಯದ ಆರೋಗ್ಯ ಕ್ಷೇತ್ರದ ಅಭಿವೃದ್ಧಿ ಕ್ರಮಗಳ ಬಗ್ಗೆ ಕೂಡ ಚರ್ಚೆ ನಡೆಸಿದರು. ಸದ್ಯ ಕೇಂದ್ರ ಪೂರೈಸುತ್ತಿರುವ ಲಸಿಕೆ ಸಾಲುತ್ತಿಲ್ಲ. ಈ ಹಿನ್ನೆಲೆಯಲ್ಲಿ ಹೆಚ್ಚಿನ ಲಸಿಕೆ ಪೂರೈಸಬೇಕೆಂದು ಮನವಿ ಮಾಡಲಾಗಿದೆ.
ಇನೊಂದೆಡೆ ರಾಜ್ಯದಲ್ಲಿ ಕೇಂದ್ರ ಸರ್ಕಾರದ ಮಂಜೂರಾತಿಯಲ್ಲಿ ನಿರ್ಮಿಸುತ್ತಿರುವ ಹೊಸ ಮೆಡಿಕಲ್ ಕಾಲೇಜುಗಳಿಗೆ ಅನುದಾನ ಬಿಡುಗಡೆ ಮಾಡಬೇಕು. ರಾಜ್ಯದಲ್ಲಿ 250 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ. ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ 250 ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಲು ಅನುದಾನ ನೀಡಬೇಕು ಎಂದು ಅವರು ಕೇಂದ್ರ ಸಚಿವರಿಗೆ ಮನವಿ ಮಾಡಿಕೊಂಡಿದ್ದಾರೆ.