ಹಾಸನ, ಫೆ 13(SM): ಜೆಡಿಎಸ್ ಗೂಂಡಾಗಿರಿ ವರ್ತನೆಯನ್ನು ಖಂಡಿಸಿ ಬಿಜೆಪಿ ಹಾಸನದಲ್ಲಿ ಪ್ರತಿಭಟನೆ ನಡೆಸಲು ಕರೆ ನೀಡಿದೆ. ಜೆಡಿಎಸ್ ವರ್ತನೆ ವಿರೋಧಿಸಿ ಹಾಸನ ವಿಧಾನಸಭಾ ಕ್ಷೇತ್ರದ ಶಾಸಕ ಪ್ರೀತಂ ಗೌಡ ಅವರು ಫೆ.14ರಂದು ಪ್ರತಿಭಟನೆ ನಡೆಸುವುದಾಗಿ ಹೇಳಿದ್ದಾರೆ. ಇನ್ನು ಬೆಳಗ್ಗೆ 10 ಗಂಟೆಗೆ ಹಾಸನದ ಹೇಮಾವತಿ ಪ್ರತಿಮೆಯಿಂದ ಎನ್.ಆರ್.ಸರ್ಕಲ್ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಪತ್ರವನ್ನು ಸಲ್ಲಿಸಲಾಗುತ್ತದೆ.
ಫೆಬ್ರವರಿ 13ರಂದು ಜೆಡಿಎಸ್ ಕಾರ್ಯಕರ್ತರು ಬಿಜೆಪಿ ಶಾಸಕ ಪ್ರೀತಂ ಗೌಡ ಅವರ ಮನೆಯ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಈ ವೇಳೆ ಮನೆಯಲ್ಲಿದ್ದ ತಾಯಿಯ ಮೇಲೆ ಹಾಗೂ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ.
ಜೆಡಿಎಸ್ ಗೂಂಡಾಗಿರಿ ವರ್ತನೆ ತೋರುತ್ತಿದೆ ಎಂಬುವುದಾಗಿ ಬಿಜೆಪಿ ಆರೋಪಿಸಿದೆ. ಹಾಗೂ ಆಡಳಿತ ಪಕ್ಷದ ಗೂಂಡಾ ವರ್ತನೆಯನ್ನು ಖಂಡಿಸಿ ಹಾಸನ ಜಿಲ್ಲಾ ಬಿಜೆಪಿ ವತಿಯಿಂದ ಪ್ರತಿಭಟನೆಗೆ ಕರೆ ನೀಡಲಾಗಿದೆ.