ತಿರುಪತಿ, ಫೆ 22(SM): ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ ಆಂಧ್ರ ಪ್ರದೇಶಕ್ಕೆ ವಿಶೇಷ ರಾಜ್ಯದ ಸ್ಥಾನ-ಮಾನ ನೀಡಲಾಗುವುದು ಎಂದು ರಾಹುಲ್ ಗಾಂಧಿ ಭರವಸೆ ನೀಡಿದ್ದಾರೆ.
ತಿರುಪತಿಯಲ್ಲಿ ರಾಹುಲ್ ಗಾಂಧಿ ಬೃಹತ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು. ಸಮಾವೇಶಕ್ಕೂ ಮೊದಲು ರಾಹುಲ್ ಗಾಂಧಿಯವರು ಕಾಲ್ನಡಿಗೆ ಮೂಲಕ ತಿರುಪತಿ ಬೆಟ್ಟ ಹತ್ತಿ ವೆಂಕಟೇಶ್ವರ ಸ್ವಾಮಿ ದರ್ಶನ ಪಡೆದರು. ಈ ಹಿಂದೆ ಚುನಾವಣೆ ಸಂದರ್ಭದಲ್ಲಿ ವಿಶೇಷ ಸ್ಥಾನಮಾನ ನೀಡುವುದಾಗಿ ಮೋದಿ ಮಾತುಕೊಟ್ಟಿದ್ದರು. ಆದರೆ ಕೊಟ್ಟ ಭರವಸೆಯನ್ನು ಈಡೇರಿಸುವಲ್ಲಿ ವಿಫಲರಾಗಿದ್ದಾರೆ.
ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕೂಡಲೇ ನಾವು ಆಂಧ್ರಕ್ಕೆ ವಿಶೇಷ ಸ್ಥಾನ-ಮಾನ ಕೊಡುತ್ತೇವೆ. ಇದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ ಎಂದು ರಾಹುಲ್ ವಾಗ್ದಾನ ನೀಡಿದರು. ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುತ್ತೇನೆ. ಪ್ರತಿಯೊಬ್ಬರ ಖಾತೆಗೆ 15 ಲಕ್ಷ ರೂಪಾಯಿ ಹಣ ಹಾಕುತ್ತೇನೆ ಎಂದು ಅಧಿಕಾರಕ್ಕೆ ಬರುವ ಮೊದಲೇ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದರು. ಆದರೆ, ನೀಡಿರುವ ಬೇಡಿಕೆಯನ್ನು ಈಡೇರಿಸಲು ಪ್ರಧಾನಿ ವಿಫಲರಾಗಿದ್ದು, ಮುಂದೆ ದೇಶದ ಅಭಿವೃದ್ಧಿಗೆ ಕಾಂಗ್ರೆಸ್ ಸರಕಾರವನ್ನು ಮತ್ತೆ ಅಧಿಕಾರಕ್ಕೆ ತರಬೇಕೆಂದು ರಾಹುಲ್ ಮನವಿ ಮಾಡಿಕೊಂಡಿದ್ದಾರೆ.