ಮಂಡ್ಯ, ಮಾ 21(SM): ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಳಿಸಿದೆ. ಕರ್ನಾಟಕದ ಒಟ್ಟು 28 ಕ್ಷೇತ್ರಗಳ ಪೈಕಿ 21 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಹೆಸರುಗಳನ್ನು ಮಾರ್ಚ್ 21ರ ಗುರುವಾರ ಪ್ರಕಟಿಸಿದೆ.
ಆದರೆ, 7 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಪ್ರಕಟಿಸದಿರುವುದು ಬಾರೀ ಕುತೂಹಲಕ್ಕೆ ಕಾರಣವಾಗಿದೆ. ಇದರಲ್ಲೂ ಮಂಡ್ಯ ಕ್ಷೇತ್ರಕ್ಕೆ ಬಿಜೆಪಿ ಇನ್ನೂ ಕೂಡ ಅಭ್ಯರ್ಥಿಯನ್ನು ಘೋಷಣೆ ಮಾಡಿಲ್ಲ. ಮಂಡ್ಯ ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಫೈನಲ್ ಮಾಡಿಲ್ಲ ಎನ್ನಲಾಗಿದೆ. ಇತ್ತ ದೋಸ್ತಿ ಸರಕಾರ ಅವಕಾಶ ನೀಡದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನ ಹಿರಿಯ ಮುಖಂಡ ದಿ. ಅಂಬರೀಶ್ ಪತ್ನಿ ಸುಮಲತಾ ಅಂಬರೀಶ್ ಪಕ್ಷೇತರರಾಗಿ ಕಣಕ್ಕಿಳಿದಿದ್ದಾರೆ. ದೋಸ್ತಿ ಸರಕಾರದಿಂದ ನಿಖಿಲ್ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸಲು ಈಗಾಗಲೇ ನಿರ್ಧರಿಸಲಾಗಿದೆ. ಕಾಂಗ್ರೆಸ್ ನ ಭದ್ರ ಕೋಟೆಯಾಗಿದ್ದ ಮಂಡ್ಯ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯನ್ನು ದೋಸ್ತಿ ಸರಕಾರ ಕಣಕ್ಕಿಳಿಸಿದ್ದಾರೆ.
ಇನ್ನು ಈ ಕ್ಷೇತ್ರದಲ್ಲಿ ಅಂಬರೀಶ್ ಸಂಪೂರ್ಣ ಹಿಡಿತ ಸಾಧಿಸಿದ್ದರು. ಅಂಬರೀಶ್ ಅಭಿಮಾನಿಗಳು ಸುಮಲತಾಗೆ ಸಂಪೂರ್ಣ ಬೆಂಬಲ ಸೂಚಿಸಿದ್ದಾರೆ. ಸುಮಲತಾ ಅವರು ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಬೃಹತ್ ಜನಸಾಗರವೇ ಸೇರಿತ್ತು. ಈ ಹಿನ್ನೆಲೆಯಲ್ಲಿ ಮಂಡ್ಯ ಕ್ಷೇತ್ರ ಸಾಕಷ್ಟು ಕುತೂಹಲವನ್ನು ಕೆರಳಿಸಿದೆ. ಈ ಹಿನ್ನೆಲೆ ಬಿಜೆಪಿ ಕೂಡ ಈ ಕ್ಷೇತ್ರದಲ್ಲಿ ಅಭ್ಯರ್ಥಿಯನ್ನು ಕಣಕ್ಕಿಳಿಸಿಲ್ಲ ಎನ್ನಲಾಗಿದೆ. ಪಕ್ಷೇತರರಾಗಿ ಕಣಕ್ಕಿಳಿದಿರುವ ಸುಮಲತಾಗೆ ಬೆಂಬಲ ನೀಡಿ ದೋಸ್ತಿ ಸರಕಾರದ ಅಭ್ಯರ್ಥಿಯನ್ನು ಸೋಲಿಸುವುದು ಬಿಜೆಪಿಯ ತಂತ್ರವಾಗಿದೆ. ಈ ಹಿನ್ನೆಲೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹಾಗೂ ಪ್ರಧಾನಿ ನರೇಂದ್ರ ಮೋದಿ ಮಾಸ್ಟರ್ ಪ್ಲಾನ್ ರೂಪಿಸಿದ್ದಾರೆ ಎನ್ನಲಾಗಿದೆ.
ಆದರೆ, ಮಂಡ್ಯದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತಾ ಅಥವಾ ಪಕ್ಷೇತರ ಅಭ್ಯರ್ಥಿ ಸುಮಲತಾಗೆ ಬೆಂಬಲ ನೀಡುತ್ತಾರಾ ಅನ್ನೋದು ಸದ್ಯದ ಕುತೂಹಲವಾಗಿದ್ದು, ಮೋದಿ ಸರಕಾರ ಅಭ್ಯರ್ಥಿಯನ್ನು ಕಣಕ್ಕಿಳಿಸಲೆದೇ ಅನ್ನೋದು ಮುಂದಿನ ದಿನಗಳಲ್ಲಿ ತಿಳಿಯಲಿದೆ.