ಶಿವಮೊಗ್ಗ, ಮಾ (DaijiworldNews/HR): "ಶೀಘ್ರದಲ್ಲೇ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿ ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಚುನಾವಣಾ ಕಣಕ್ಕೆ ಇಳಿಯುತ್ತೇನೆ" ಎಂದು ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಘೋಷಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, "ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಸಾರ್ವಜನಿಕ ವೇದಿಕೆಯಲ್ಲಿ ಕೂಡ ನಿಲುವು ಪ್ರಕಟಿಸಿದ್ದೇನೆ. ಪಕ್ಷದ ವೇದಿಕೆಯಲ್ಲಿ ಕೂಡ ನನ್ನ ವಿನಂತಿಯನ್ನು ಸಲ್ಲಿಸಿದ್ದೇನೆ" ಎಂದರು.
ಇನ್ನು "ನನ್ನ ವಿನಂತಿಗೆ ಪೂರಕವಾಗಿ ಪಕ್ಷದಿಂದ ಟಿಕೆಟ್ ಸಿಗುವ ಲಕ್ಷಣ ಕಾಣಿಸುತ್ತಿಲ್ಲ. ಆದರೆ ಕೆಲವರ ಮಕ್ಕಳ ಹೆಸರುಗಳು ಓಡಾಡುತ್ತಿವೆ. ಮೊನ್ನೆ ಈಶ್ವರಪ್ಪ ಹೇಳಿದ ಮಾತನ್ನು ಗಂಭೀರವಾಗಿ ಪರಿಗಣಿಸಿ ಒಂದು ನಿರ್ಧಾರಕ್ಕೆ ಬಂದಿದ್ದೇನೆ. ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಬೇಕು ಎಂದು ತೀರ್ಮಾನಿಸಿದ್ದೇನೆ" ಎಂದಿದ್ದಾರೆ.
ಈಶ್ವರಪ್ಪ ಅವರು ಪತ್ರಿಕಾಗೋಷ್ಠಿಯಲ್ಲಿ ನನ್ನ ಕೇರ್ ಮಾಡಿಲ್ಲ ಎಂದು ಹೇಳಿದ್ದಾರೆ. ಅವರ ಏಕವಚನ ಅವರ ಶಿಕ್ಷಣದ ಮಟ್ಟ ಅದು. ಅವರು ಬಹುವಚನ ಮಾತನಾಡಿದರೆ ರಾಜ್ಯದ ಜನರಿಗೆ ಆಶ್ಚರ್ಯವಾಗುತ್ತದೆ. ಈಶ್ವರಪ್ಪ ಹೇಳಿದ್ದನ್ನು ಸವಾಲಾಗಿ ಸ್ವೀಕರಿಸಿದ್ದೇನೆ. ಈ ಬಾರಿ ನಾನು ಸ್ಫರ್ಧೆ ಮಾಡುತ್ತೇನೆ ಎಂದು ಹೇಳಿದ್ದಾರೆ.