ಧಾರವಾಡ, ಮಾ.23(AZM): ನಿರ್ಮಾಣ ಹಂತದ ಕಟ್ಟಡ ದುರಂತ ಪ್ರಕರಣದಲ್ಲಿ ಸಂಬಂಧಪಟ್ಟ ಇಲಾಖೆಯ ಏಳು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ ಯು.ಟಿ.ಖಾದರ್ ರವರು ಹೇಳಿದ್ದಾರೆ.
ಅವರು ಮಾ.23ರ ಶನಿವಾರದಂದು ನಡೆದ ಸುದ್ಧಿಗೋಷ್ಠಿಯನ್ನು ಉದ್ದೇಶಿಸಿ ಈ ಕುರಿತು ಮಾತನಾಡಿದರು. ಕಟ್ಟಡ ಕಟ್ಟಲು ಅನುಮತಿ ನೀಡಿದ, ಇಲಾಖೆಯ 7 ಜನ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಹಾಗೂ ಕಟ್ಟಡದ ಮಾಲಕರು,ಅಧಿಕಾರಿಗಳ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.
ಕಟ್ಟಡ ಕುಸಿತ ಪ್ರಕರಣ ಅತ್ಯಂತ ದುರದೃಷ್ಟಕರವಾಗಿದ್ದು, ನಾನು ಸಾವು-ನೋವಿನ ದುಃಖದಲ್ಲಿ ಭಾಗಿಯಾಗುತ್ತೇನೆ ಹಾಗೂ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಸರಕಾರ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಿದೆ ಎಂದು ಇದೇ ಸಂದರ್ಭದಲ್ಲಿ ಅವರು ತಿಳಿಸಿದರು.