ಬೆಂಗಳೂರು, ಮೇ 06 (DaijiworldNews/MS): ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಅವರ ಕುಟುಂಬವನ್ನು ಕೊಲ್ಲಲು ಬಿಜೆಪಿ ಸಂಚು ರೂಪಿಸಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಆರೋಪಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು, ಹತ್ಯೆಗೆ ಸಂಚು ನಡೆದಿದ್ದರೂ ಮೋದಿ ಹಾಗೂ ಬಿಜೆಪಿ ನಾಯಕರು ಮೌನಕ್ಕೆ ಶರಣಾಗಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕ ರಾಜ್ಯದ ಜನ ಕಾಂಗ್ರೆಸ್ ಪಕ್ಷಕ್ಕೆ ಸಂಪೂರ್ಣ ಬೆಂಬಲ ತೋರುತ್ತಿರುವುದರಿಂದ ಕಂಗೆಟ್ಟಿರುವ ಬಿಜೆಪಿ ಮಲ್ಲಿಕಾರ್ಜುನ ಖರ್ಗೆ, ಅವರ ಪತ್ನಿ ಸೇರಿದಂತೆ ಇಡೀ ಕುಟುಂಬವನ್ನೇ ಹತ್ಯೆ ಮಾಡುವ ಸಂಚು ರೂಪಿಸಿದೆ. ಮೋದಿ ಹಾಗೂ ಬೊಮ್ಮಾಯಿಯ ಆಪ್ತ ಚಿತ್ತಾಪುರ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಥೋಡ್ ಅವರ ಆಡಿಯೋದಲ್ಲಿ ಈ ಸಂಚು ಸ್ಪಷ್ಟವಾಗಿದೆ ಎಂದು ಸುರ್ಜೇವಾಲಾ ಹೇಳಿದ್ದಾರೆ.
ಬಿಜೆಪಿ ತನ್ನ ದ್ವೇಷದ ಮೂಲಕ ಕರ್ನಾಟಕದ ಮಣ್ಣಿನ ಮಗ ಮಲ್ಲಿಕಾರ್ಜುನ ಖರ್ಗೆ ಹಾಗೂ ಅವರ ಕುಟುಂಬವನ್ನು ಕೊಲ್ಲುವ ಸಂಚು ರೂಪಿಸಿ ಪಾಪದ ಕೃತ್ಯ ಎಸಗಿದೆ ಎಂದು ಸುರ್ಜೇವಾಲಾ ಆರೋಪಿಸಿದ್ದಾರೆ. ಮಣಿಕಂಠ ರಾಥೋಡ್ ಖರ್ಗೆ ಕುಟುಂಬದ ಹತ್ಯೆ ಬಗ್ಗೆ ಮಾತನಾಡಿರುವ ಆಡಿಯೋ ರಿಲೀಸ್ ಮಾಡಿದ್ದಾರೆ.