ಬೆಂಗಳೂರು, ಮೇ 13 (DaijiworldNews/HR): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಷಡ್ಯಂತ್ರ ರೂಪಿಸಿ ಸಂಸದ ಸ್ಥಾನದಿಂದ ಅನರ್ಹಗೊಳಿಸುವ ಪ್ರಯತ್ನವನ್ನು ಬಿಜೆಪಿ ನಾಯಕರು ಮಾಡಿದ್ದು ಇದೀಗ ಕರ್ನಾಟಕ ಚುನಾವಣೆಯಲ್ಲಿ ಬಿಜೆಪಿಗೆ ಜನರು ತಕ್ಕ ಉತ್ತರ ನೀಡಿದ್ದಾರೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ.
ಈ ಕುರಿತು ಮಾತನಾಡಿರುವ ಅವರು, ಕರ್ನಾಟಕದ ವಿಧಾನಸಭಾ ಚುನಾವಣೆಯಲ್ಲಿ ಭ್ರಷ್ಟ, ಕೋಮುವಾದಿ ಬಿಜೆಪಿಯನ್ನು ಅಧಿಕಾರದಿಂದ ಕೆಳಕ್ಕೆ ಇಳಿಸಿರುವ ರಾಜ್ಯದ ಮತದಾರರು, ಕಾಂಗ್ರೆಸ್ಗೆ ಅಭೂತಪೂರ್ವ ಬಹುಮತ ನೀಡಿದ್ದಾರೆ ಎಂದರು.
ಇನ್ನು ಬಿಜೆಪಿಯ ನಕಲಿ ಹಿಂದುಳಿದ ವರ್ಗಗಳ ನಾಯಕರು ರಾಜ್ಯದ ಹಿಂದುಳಿದ ವರ್ಗಗಳ ಜನರಿಗೆ ಮೋಸ ಮಾಡಲು ಹೊರಟಿದ್ದು, ಈ ಚುನಾವಣೆಯಲ್ಲಿ ಕರ್ನಾಟಕದ ಹಿಂದುಳಿದ ವರ್ಗಗಳ ಜನರು ಬಿಜೆಪಿಗೆ ಸರಿಯಾದ ಪಾಠ ಕಲಿಸಿದ್ದಾರೆ ಎಂದಿದ್ದಾರೆ.
ಧರ್ಮದ ಹೆಸರಿನಲ್ಲಿ ಮೋಸ ಮಾಡುವ ಪ್ರಯತ್ನ ಹೆಚ್ಚು ದಿನ ಮುಂದುವರಿಯುವುದಿಲ್ಲ ಎಂಬ ಸಂದೇಶವನ್ನು ಈ ಫಲಿತಾಂಶದ ಮೂಲಕ ರವಾನಿಸಿದ್ದಾರೆ ಎಂದು ಹೇಳಿದ್ದಾರೆ.