ಅಹಮದಾಬಾದ್,ಮಾ(AZM): ಬಿಜೆಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು, ಗುಜರಾತ್ನ ಗಾಂಧಿನಗರ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದು, ಇಂದು ನಾಮಪತ್ರ ಸಲ್ಲಿಸಿದ್ದಾರೆ.
ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಅರುಣ್ ಜೇಟ್ಲಿ, ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಹಾಗೂ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾಣಿ ಅವರು ಅಮಿತ್ ಶಾರಿಗೆ ಸಾತ್ ನೀಡಿದರು.
ನಾಮಪತ್ರ ಸಲ್ಲಿಕೆಯ ನಂತರ ಮಾಧ್ಯಮದವರ ಜೊತೆ ಮಾತನಾಡಿದ ಅರುಣ್ ಜೇಟ್ಲಿ, 'ಅಡ್ವಾಣಿ, ವಾಜಪೇಯಿಯಂಥ ಹಿರಿಯ ನಾಯಕರು ಪ್ರತಿನಿಧಿಸಿದ್ದ ಕ್ಷೇತ್ರವಿದು. ಈ ಕ್ಷೇತ್ರ ಎಷ್ಟು ಮುಖ್ಯ ಎಂಬುದನ್ನು ಅರಿತುಕೊಂಡು ಪಕ್ಷದ ಅಧ್ಯಕ್ಷರನ್ನೇ ಈ ಕ್ಷೇತ್ರದಿಂದ ಕಣಕ್ಕಿಳಿಸಲು ಎಲ್ಲ ನಾಯಕರು ನಿರ್ಧರಿಸಿದರು. ದಾಖಲೆಯ ಮತಗಳಿಂದ ಶಾ ಇಲ್ಲಿ ಗೆಲುವು ಸಾಧಿಸಲಿದ್ದಾರೆ. ಅಷ್ಟೇ ಅಲ್ಲದೆ ಗುಜರಾತ್ನ ಎಲ್ಲ 26 ಕ್ಷೇತ್ರಗಳಲ್ಲೂ ನಮ್ಮ ಅಭ್ಯರ್ಥಿಗಳೇ ಗೆಲ್ಲಲಿದ್ದಾರೆ. ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗುವುದು ಖಚಿತ' ಎಂದು ತಿಳಿಸಿದರು.