ನವದೆಹಲಿ, ಮೇ 30 (DaijiworldNews/HR): ದೆಹಲಿಯ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ದೆಹಲಿಯ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾಗೆ ದೆಹಲಿ ಹೈಕೋರ್ಟ್ ಜಾಮೀನು ನೀಡಲು ನಿರಾಕರಿಸಿದೆ.
ಮೇ 30ರಂದು ದೆಹಲಿ ಹೈಕೋರ್ಟ್ ನ ಏಕಸದಸ್ಯ ಪೀಠದ ನ್ಯಾಯಾಧೀಶರಾದ ದಿನೇಶ್ ಕುಮಾರ್ ಶರ್ಮಾ ಅವರು ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದಾರೆ.
ಸಿಸೋಡಿಯಾ ವಿರುದ್ಧದ ಆರೋಪ ಗಂಭೀರವಾಗಿರುವುದರಿಂದ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಪೀಠ ತಿಳಿಸಿದೆ.
ಇನ್ನು ಜಾಮೀನು ಅರ್ಜಿ ಕುರಿತು ವಿಚಾರಣೆ ನಡೆಸಿದ ಹೈಕೋರ್ಟ್ ಆದೇಶ ನೀಡುವ ವೇಳೆ, ಮನೀಶ್ ಸಿಸೋಡಿಯಾ ಪ್ರಭಾವಿ ವ್ಯಕ್ತಿಯಾಗಿದ್ದು, ಒಂದು ವೇಳೆ ಜಾಮೀನು ನೀಡಿದಲ್ಲಿ ಅವರು ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ ಎಂದು ಅಭಿಪ್ರಾಯವ್ಯಕ್ತಪಡಿಸಿದೆ.