ಬೆಂಗಳೂರು, ಜೂ 10 (DaijiworldNews/HR): ಕಾಂಗ್ರೆಸ್ ಸರಕಾರದ ದ್ವೇಷದ ರಾಜಕಾರಣ ಮುಂದುವರೆದಿರುವುದರಿಂದ ಅದನ್ನು ಎದುರಿಸಲು ನಮ್ಮ ಕಾರ್ಯಕರ್ತರಿಗೆ ನೆರವಾಗುವ ದೃಷ್ಟಿಯಿಂದ ‘ಕಾನೂನು ಸಹಾಯವಾಣಿ’ (18003091907) ಉದ್ಘಾಟಿಸಲಾಗಿದೆ ಎಂದು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ತಿಳಿಸಿದ್ದಾರೆ.
ಹೆಲ್ಪ್ ಲೈನ್ ಉದ್ಘಾಟಿಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಮುಂದಿನ ದಿನಗಳಲ್ಲಿ ನಮ್ಮ ಕಾರ್ಯಕರ್ತರ ಮೇಲೆ, ನಮ್ಮ ಪರವಾಗಿ ಕೆಲಸ ಮಾಡುವವರ ಮೇಲೆ ರಾಜಕೀಯ ದ್ವೇಷದ ರಾಜಕೀಯ ಮಾಡುವ ಮುನ್ಸೂಚನೆಗಳು ಸಿಕ್ಕಿವೆ ಎಂದರು.
ಇನ್ನು ಹೋರಾಟದ ಮೂಲಕವೇ ಬಿಜೆಪಿ ಬೆಳೆದುಬಂದಿದ್ದು, ಈ ಪಕ್ಷದ ದಮನ ಇವತ್ತಿನದಲ್ಲ. ಇಂಥ ದ್ವೇಷವನ್ನು ಎದುರಿಸಿಯೇ ನಮ್ಮ ಪಕ್ಷ ಮುಂದುವರಿದಿದೆ. ನಮ್ಮ ಕಾರ್ಯಕರ್ತರು ವಿಶ್ವಾಸ- ಧೈರ್ಯ ಕಳೆದುಕೊಳ್ಳಬಾರದು ಎಂದಿದ್ದಾರೆ.
ಬಿಜೆಪಿಯು ಅನ್ಯಾಯ, ಅವ್ಯವಸ್ಥೆ ವಿರುದ್ಧ ಹೋರಾಟ ಮಾಡೋಣ ಎಂದು ಕಿವಿಮಾತು ಮತ್ತು ಧೈರ್ಯ ಹೇಳಿದ ಅವರು, ದೌರ್ಜನ್ಯ ನಡೆದರೆ, ಸುಳ್ಳು ಕೇಸು ಹಾಕಿದರೆ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ಎಂದು ತಿಳಿಸಿದ್ದಾರೆ.