ಶಿವಮೊಗ್ಗ,ಆ 14 (DaijiworldNews/AK): ರಾಜ್ಯದಲ್ಲಿ ರಾಜಕೀಯ ಅಸ್ಥಿರತೆ ಇದೆ. ಕೃಷಿ ಮಂತ್ರಿಗಳ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲಾಗಿದೆ. ತನಿಖೆಗೆ ಆದೇಶಿಸಿದ್ದಾರೆ ಕಾದು ನೋಡೋಣ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
ಮಾಧ್ಯಮದೊಂದಿಗೆ ಮಾತನಾಡಿದ ಅವರು, ರಾಜಕೀಯವಾಗಿ ಸರ್ಕಾರದ ಮಂತ್ರಿಗಳ ಮೇಲೆ ನಿರಂತರ ಭ್ರಷ್ಟಾಚಾರದ ಆರೋಪ ಕೇಳಿ ಬರುತ್ತಿದೆ. ಭ್ರಷ್ಟಾಚಾರದ ಆರೋಪಗಳು ತನಿಖೆಗಳ ಮೂಲಕ ಹೊರ ಬರಬೇಕು. ಸಚಿವರನ್ನು ಕ್ಯಾಬಿನೆಟ್ನಿಂದ ಕೈಬಿಡಬೇಕು ಎಂದು ಹೇಳಿದರು.
ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಆಕಾಂಕ್ಷಿಗಳ ಪಟ್ಟಿ ಶೀಘ್ರವೇ ತಯಾರಿಸಲಾಗುವುದು. ಹಿಂದಿನ ಚುನಾವಣೆಯಂತೆ ಈ ಬಾರಿ ಚುನಾವಣೆಯಲ್ಲಿ ಬಿಜೆಪಿ 25 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.