ತುಮಕೂರು, ಆ 15 (DaijiworldNews/MS): ರಾಜ್ಯದಲ್ಲಿ ಮುಂಗಾರು ಮಳೆ ಕೊರತೆಯ ಹಿನ್ನೆಲೆಯಲ್ಲಿ ಲೋಡ್ ಶೆಡ್ಡಿಂಗ್ ಅನಿವಾರ್ಯತೆ ಸೃಷ್ಟಿಯಾಗಲಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಮಳೆ ಕೊರತೆ ಹಿನ್ನಲೆಯಲ್ಲಿ ಜಲಾಶಯ ಸೇರಿದಂತೆ ವಿವಿಧೆಡೆ ಜಲವಿದ್ಯುತ್ ಉತ್ಪಾದನೆ ಪ್ರಮಾಣ ಕಡಿಮೆಯಾಗಿದೆ. ಈ ಹಿನ್ನೆಲೆಯಲ್ಲಿ ಲೋಡ್ ಶೆಡ್ಡಿಂಗ್ ಮಾಡುವ ಮೂಲಕ ವಿದ್ಯುತ್ ಪೂರೈಕೆಯನ್ನು ಮ್ಯಾನೇಜ್ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.
ತುಮಕೂರಿನಲ್ಲಿ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ನೆರವೇರಿಸಿ, ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಜಲ ವಿದ್ಯುತ್ ಉತ್ಪಾದನೆ ಕಡಿಮೆಯಾಗಿದೆ. ಹೀಗಾಗಿ ಕೆಲವು ಕಡೆ ಲೋಡ್ ಶೆಡ್ಡಿಂಗ್ ಮಾಡಿ ಮ್ಯಾನೇಜ್ ಮಾಡಲಾಗುತ್ತಿದೆ ಎಂಬ ಮಾಹಿತಿಯನ್ನು ನೀಡಿದರು.
ಮುಂದುವರೆದು, ರಾಜ್ಯದ 5 ರಿಂದ 11 ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿದೆ. ನಮ್ಮ ಜಿಲ್ಲೆಯಲ್ಲಿ ಶೇ.35 ಬಿತ್ತನೆಯಾಗಿದೆ. ಅಂಕಿ ಅಂಶ ತರಿಸಿಕೊಂಡು ಬರಪೀಡಿತ ಪ್ರದೇಶ ಎಂದು ಘೋಷಣೆ ಮಾಡುತ್ತೇವೆ ಎಂದು ಸುಳಿವು ನೀಡಿದರು.