ಬೆಂಗಳೂರು, ಆ 16 (DaijiworldNews/SM) : ಮುಂಬರುವ ಲೋಕಸಭಾ ಚುನಾವಣೆಯ ಸಿದ್ಧತೆಯ ಕುರಿತಂತೆ ದಕ್ಷಿಣ ಕನ್ನಡ ಜಿಲ್ಲೆಯ ಶಾಸಕರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಜತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಬುಧವಾರ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆದಿದೆ ಎಂದು ವರದಿಯಾಗಿದೆ.
ಜಿಲ್ಲೆಯ ಅಭಿವೃದ್ಧಿ ಕೆಲಸಗಳು, ಅಭಿವೃದ್ಧಿಗೆ ಬೇಕಾದ ಅನುದಾನ ಸೇರಿದಂತೆ ಪಕ್ಷ ಮತ್ತು ಕಾರ್ಯಕರ್ತರ ಜತೆಗಿನ ಸಮನ್ವಯ ಹಾಗೂ ಲೋಕಸಭಾ ಚುನಾವಣೆ ಕುರಿತಾಗಿ ಅಭಿಪ್ರಾಯ ವ್ಯಕ್ತವಾಯಿತು. ಅಲ್ಲದೆ, ಎಲ್ಲಾ ಶಾಸಕರ ಸರ್ವ ಒಮ್ಮತದ ಅಭ್ಯರ್ಥಿಯನ್ನು ಲೋಕಸಭಾ ಕಣಕ್ಕಿಳಿಸಿದರೆ, ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಬಹುದೆಂದು ಶಾಸಕರು ಸಭೆಯಲ್ಲಿ ಭರವಸೆ ವ್ಯಕ್ತಪಡಿಸಿದ್ದಾರೆನ್ನಲಾಗಿದೆ.
ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ, ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಸೇರಿದಂತೆ ಮತ್ತಿತ್ತರರು ಉಪಸ್ಥಿತರಿದ್ದರು.