ಬೆಂಗಳೂರು, ಆ 28 (DaijiworldNews/MS): ಮಕ್ಕಳ ಸಂಖ್ಯೆ ಕಡಿಮೆಯಿರುವ ಶಾಲೆಗಳನ್ನು ಹತ್ತಿರದ ಶಾಲೆಗಳೊಂದಿಗೆ ವಿಲೀನಗೊಳಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿ, ಮಕ್ಕಳ ಸಂಖ್ಯೆ ಕಡಿಮೆ ಇರುವ ಕಡೆ ಶಿಕ್ಷಕರಿಗೆ ಕೆಲಸವೇ ಇಲ್ಲದಂತಾಗಿದೆ. ಮಕ್ಕಳಿಗೂ ಶಾಲಾ ವಾತಾವರಣ ಹಿತಕರವಾಗಿರುವುದಿಲ್ಲ. ಸಾರಿಗೆ ವ್ಯವಸ್ಥೆ ಅನುಕೂಲ ಇರುವ ಕಡೆ ಮಕ್ಕಳ ಸಂಖ್ಯೆ ಇರುವ ಶಾಲೆಗಳನ್ನು ವಿಲೀನ ಮಾಡಿದರೆ ಅನುಕೂಲ ಎಂದು ಶಾಸಕರಿಂದ ಸಲಹೆ ಬಂದಿದೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ 15ಕ್ಕಿಂತ ಕಡಿಮೆ ಮಕ್ಕಳು ಇರುವ 22 ಸಾವಿರ ಶಾಲೆಗಳಿವೆ. ಹೀಗಾಗಿ, ಕಡಿಮೆ ಮಕ್ಕಳಿರುವ ಶಾಲೆಗಳನ್ನು ಉತ್ತಮ ಶಾಲೆಗಳೊಂದಿಗೆ ಸೇರಿಸಲು ಉದ್ದೇಶಿಸಿದ್ದು, ಈ ಸಂಬಂಧ ಸಿಎಂ ಸಿದ್ದರಾಮಯ್ಯ ಜತೆ ಚರ್ಚೆ ನಡೆಸಲಾಗುವುದು. ರಾಜ್ಯದಲ್ಲಿ ಎಲ್ಲೆಲಲ ಎನ್ಇಪಿ ಜಾರಿಯಾಗಿದೆಯೋ ಅಲ್ಲೆಲ್ಲ ಮಕ್ಕಳಿಗೆ ತೊಂದರೆಯಾಗುತ್ತದೆ. ಈ ಕಾರಣಕ್ಕೆ ರಾಜ್ಯ ಶಿಕ್ಷಣ ನೀತಿ ಜಾರಿಗೊಳಿಸಲಾಗುವುದು ಎಂದರು.