ಧಾರವಾಡ,ಸೆ 09 (DaijiworldNews/AK):ಕೃಷಿ ವಿವಿಗಳು ಒಣಭೂಮಿಯಲ್ಲಿ ಕೃಷಿ ಅಭಿವೃದ್ಧಿ ಪಡಿಸುವ ಕುರಿತು ಹೆಚ್ಚು ಸಂಶೋಧನೆ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಮಧ್ಯಾಹ್ನ ಕೃಷಿ ವಿಶ್ವವಿದ್ಯಾಲಯ ಆವರಣದಲ್ಲಿ ಆಯೋಜಿಸಲಾಗಿದ್ದ ಕೃಷಿಮೇಳ- 2023 ಉದ್ಘಾಟಿಸಿ, ಮಾತನಾಡಿದರು.
ಇಂದು ಶೇ.60 ರಷ್ಟು ಜನ ಕೃಷಿ ಮಾಡುತ್ತಿದ್ದು, ಭಾರತವು ಕೃಷಿ ಪ್ರಧಾನ ದೇಶವಾಗಿದ್ದರೂ ಸಾಕಷ್ಟು ಜನ ಕೃಷಿಯಿಂದ ವಿಮುಖರಾಗುತ್ತಿದ್ದಾರೆ. ಮಳೆ ಆಧಾರಿತ ಕೃಷಿ ಭೂಮಿ ಇರುವದರಿಂದ ಮಳೆ ಕೊರತೆಯಾಗಿ ಸಮಸ್ಯೆ ಆಗುತ್ತಿದೆ ಎಂದರು
ಯುವಕರು, ಹೆಚ್ಚುಜನ ಕೃಷಿಯಲ್ಲಿ ತೊಡಗಿಸಿಕೊಳ್ಳುವಂತೆ ಕೃಷಿ ವಿವಿಗಳು ಕಾರ್ಯ ಮಾಡಬೇಕು. ವಿಶ್ವವಿದ್ಯಾಲಯದ ಸಂಶೋಧನೆ, ತಾಂತ್ರಿಕತೆಗಳು ರೈತರ ಜಮೀನುಗಳಿಗೆ ತಲುಪಿದರೆ ಮಾತ್ರ ಸಾರ್ಥಕವಾಗುತ್ತದೆ. ಕೃಷಿ ಮೇಳಗಳು ಜಾತ್ರೆಗಳಾಗದೇ ಕೃಷಿ ಕ್ಷೇತ್ರಕ್ಕೆ ಯುವಕರನ್ನು, ಹೊಸಬರನ್ನು ಸೆಳೆಯುವಂತೆ ಆಕರ್ಷಕವಾಗಿ ಸಂಘಟಿಸಬೇಕು ಎಂದರು.
ಒಣ ಬೇಸಾಯ ಮಾಡುವ ರೈತರ ಬಗ್ಗೆ ವಿಶೇಷ ಕಾಳಜಿ ಇದೆ. ಒಣಬೇಸಾಯ ಮಾಡಲು ಅಗತ್ಯ ಸುಧಾರಿತ ಹೊಸ ತಳಿಗಳ ಸಂಶೋಧನೆ ಮಾಡಬೇಕು. ಬಿತ್ತಿದ ಯಾವುದೇ ಮುಖ್ಯ ಬೆಳೆ ಹಾಳಾದರೆ, ಅದಕ್ಕೆ ಪರ್ಯಾಯವಾದ ತಕ್ಷಣದ ಬೆಳೆಗಳನ್ನು ಮಾಡಬೇಕು ಎಂಬುದರ ಬಗ್ಗೆ ವಿಜ್ಞಾನಿಗಳು ಆಸಕ್ತಿ ವಹಿಸಿ, ಸಂಶೋಧನೆ ಮಾಡಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದರು.