ಶಿವಮೊಗ್ಗ, ಅ 0 (DaijiworldNews/AK):ಈದ್ ಮಿಲಾದ್ ಮೆರವಣಿಗೆ ವೇಳೆ ಕಿಡಿಗೇಡಿಗಳು ನಿನ್ನೆ ಸಂಜೆ ಕಲ್ಲು ತೂರಿದ್ದು ಪರಿಸ್ಥಿತಿ ಉದ್ವಿಗ್ನವಾಗಿದೆ. ಶಾಂತಿನಗರದ ರಾಗಿಗುಡ್ಡ ಪ್ರದೇಶದಲ್ಲಿ ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಪೊಲೀಸರು ಮುಂಜಾಗ್ರತಾ ಕ್ರಮವಾಗಿ 144 ಸೆಕ್ಷನ್ ಜಾರಿ ಮಾಡಿದ್ದಾರೆ.
ಈದ್ ಮಿಲಾದ್ ಅಂಗವಾಗಿ ಬೃಹತ್ ಮಟ್ಟದಲ್ಲಿ ಮೆರವಣಿಗೆಯನ್ನು ಆಯೋಜನೆ ಮಾಡಲಾಗಿತ್ತು. ಮೆರವಣಿಗೆ ರಾಗಿಗುಡ್ಡ ತಲುಪಿದ ವೇಳೆ ಕಟೌಟ್ ವಿಚಾರವಾಗಿ ಹಿಂದೂ ಹಾಗೂ ಮುಸ್ಲಿಂ ಸಮುದಾಯದವರ ನಡುವೆ ಮಾತಿನ ಚಕಮಕಿ ಉಂಟಾಗಿದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಘರ್ಷಣೆಯಾಗಿದೆ.
ಈ ವೇಳೆ ಕೆಲ ವ್ಯಕ್ತಿಗಳು ಮೆರವಣಿಗೆಯ ಮೇಲೆ ಕಲ್ಲು ತೂರಾಟ ನಡೆಸಿದ್ದು, ಎರಡು ಕೋಮಿನ ಯುವಕರ ಗುಂಪಿನಿಂದ ಕಲ್ಲು ತೂರಾಟ ನಡೆದ ಪರಿಣಾಮ 7ಕ್ಕೂ ಹೆಚ್ಚು ಕಾರುಗಳು ಹಾಗೂ ಮನೆಯ ಕಿಟಕಿ ಗಾಜುಗಳು ಜಖಂಗೊಂಡಿವೆ. ಕೆಲವರಿಗೆ ಗಂಭೀರ ಗಾಯಗಳು ಆಗಿವೆ. ಘಟನೆಯಲ್ಲಿ 35ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆಯಲಾಗಿದ್ದು, ಮತ್ತಷ್ಟು ಜನರನ್ನು ಬಂಧಿಸಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಗಲಾಟೆ ಬಳಿಕ ಶಾಂತಿನಗರದ ರಾಗಿಗುಡ್ಡ ಪ್ರದೇಶದಲ್ಲಿ ಸೆಕ್ಷನ್ 144 ಜಾರಿ ಮಾಡಿರುವ ಹಿನ್ನಲೆ ಪರಿಸ್ಥಿತಿ ಹತೋಟಿಯಲ್ಲಿದೆ. ಶಾಂತಿನಾಗರದಲ್ಲಿ ಪೊಲೀಸ್ ಹದ್ದಿನ ಕಣ್ಣಿಟ್ಟಿದೆ. ಶಿವಮೊಗ್ಗದ ಪ್ರಮುಖ ರಸ್ತೆಗಳಿಗೆ ಬ್ಯಾರಿಕೇಡ್ ಹಾಕಿ ರಸ್ತೆ ಬ್ಲಾಕ್ ಮಾಡಲಾಗಿದೆ. ಅಲ್ಲದೇ ಮುಂಜಾಗ್ರತಾ ಕ್ರಮವಾಗಿ ಅಂಗಡಿ ಮುಂಗಟ್ಟು ಮುಚ್ಚಿಸಿದ್ದಾರೆ. ಇನ್ನು ಮನೆಯಿಂದ ಹೊರಬಂದವರನ್ನು ವಾಪಸ್ ಕಳುಹಿಸಲಾಗುತ್ತಿದೆ.
ಮುಂಜಾಗ್ರತಾ ಕ್ರಮವಾಗಿ ಶಾಂತಿನಗರ ಮುಖ್ಯ ರಸ್ತೆಯ ಮೂಲಕ ರಾಗಿ ಗುಡ್ಡಕ್ಕೆ ಸಂಪರ್ಕಿಸುವ ರಸ್ತೆಯಲ್ಲಿ ತಪಾಸಣೆ ಮಾಡಲಾಗುತ್ತಿದೆ. ಶಾಂತಿ ನಗರಕ್ಕೆ ಪ್ರವೇಶಿಸುವ ಮತ್ತು ಹೊರ ಬರುವ ವಾಹನಗಳ ತಡೆದು ಪೊಲೀಸರು ತಪಾಸಣೆ ಮಾಡಿ ಕಳುಹಿಸುತ್ತಿದ್ದಾರೆ. ಅನುಮಾನಾಸ್ಪದವಾಗಿ ತಿರುಗಿದವರ ಬೈಕ್ ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದು, ಬಿಗಿ ಬಂದೋಬಸ್ತ್ನಿಂದಾಗಿ ಇದೀಗ ಶಿವಮೊಗ್ಗ ಸಂಪೂರ್ಣ ಹತೋಟಿಗೆ ಬಂದಿದೆ.