ರಾಮನಗರ,ಅ 02 (DaijiworldNews/AK): ಸಂಕ್ರಾಂತಿ ವೇಳೆಗೆ ಸೂರ್ಯ ಪಥ ಬದಲಿಸುವ ರೀತಿ, ರಾಜಕೀಯ ಪಥ ಬದಲಾವಣೆಯಾಗಲಿದೆ ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಹೊಸ ಭವಿಷ್ಯ ನುಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಕ್ರಾಂತಿ ಬಳಿಕ ಕಾಂಗ್ರೆಸ್ ಸರ್ಕಾರ ಇರುವುದು ಅನುಮಾನ. ಪ್ರಸಕ್ತ ರಾಜಕೀಯ ಬೆಳವಣಿಗೆ, ಕಾಂಗ್ರೆಸ್ ನಾಯಕರ ನಡೆಯೇ ಇದಕ್ಕೆ ಕಾರಣ. 2023 ಮುಗಿದ ಬಳಿಕ ರಾಜಕೀಯ ಬದಲಾವಣೆ ನಿರೀಕ್ಷೆಯಿದೆ. ಕಾಂಗ್ರೆಸ್ ನ ಅಸಮಾಧಾನಿತ ಶಾಸಕರು ವಿಮುಖವಾಗಿ ಯೋಚನೆ ಮಾಡುತ್ತಿದ್ದಾರೆ. ಕೆಲ ಕಾಂಗ್ರೆಸ್ ಶಾಸಕರು ವೈಯಕ್ತಿಕವಾಗಿ ನನ್ನ ಜೊತೆ ಮಾತನಾಡಿದ್ದಾರೆ ಎಂದರು.
ಯಾವುದೇ ಅಭಿವೃದ್ಧಿ ಕಾರ್ಯಕ್ಕೆ ಸರ್ಕಾರದಲ್ಲಿ ದುಡ್ಡಿಲ್ಲ. ಕಾಂಗ್ರೆಸ್ ಶಾಸಕರು ನಿರುದ್ಯೋಗಿಗಳಾಗಿದ್ದಾರೆ. ಅವರಿಗೆ ರಾಜಕೀಯ ಭವಿಷ್ಯದ ಆತಂಕವಿದೆ. ಹಾಗಾಗಿ ಇದರ ಪರಿಣಾಮವನ್ನು ಸಂಕ್ರಾಂತಿ ವೇಳೆಗೆ ಎಲ್ಲರೂ ನೋಡುತ್ತೀರಿ ಎಂದರು.
ನಾವು ಯಾವುದೇ ರೀತಿಯ ಆಪರೇಷನ್ ಮಾಡುತ್ತಿಲ್ಲ. ನಮ್ಮ ಸಂಪರ್ಕದಲ್ಲಿ ಯಾರೂ ಇಲ್ಲ. ಡಿಕೆ ಶಿವಕುಮಾರ್ ರೀತಿ ಆಪರೇಷನ್ ಹಸ್ತದ ಕೆಲಸವನ್ನೂ ನಾವು ಮಾಡಲ್ಲ. ಸದ್ಯ ನನಗಿರುವ ಮಾಹಿತಿ ಪ್ರಕಾರ ಹೇಳಿದ್ದೇನೆ. ಖಾಸಗಿಯಾಗಿ ಸಿಕ್ಕಾಗ ಕೆಲವರು ನೋವನ್ನ ಹೇಳಿಕೊಂಡಿದ್ದಾರೆ. ಕಾಂಗ್ರೆಸ್ ಶಾಸಕರೆ ಸರ್ಕಾರದ ವಿರುದ್ಧ ತಿರುಗಿ ಬೀಳುತ್ತಾರೆ ಎಂದು ಸಿ.ಪಿ.ಯೋಗೇಶ್ವರ್ ರಾಜಕೀಯ ಭವಿಷ್ಯ ನುಡಿದರು
ಮೈತ್ರಿ ಬಗ್ಗೆ ನಿನ್ನೆ ಜೆಡಿಎಸ್ ಸರ್ವಾನುಮತದ ಒಪ್ಪಿಗೆ ಪಡೆದಿದೆ. ಮುಂದಿನವಾರ ಚನ್ನಪಟ್ಟಣ ಬಿಜೆಪಿ ಸ್ಥಳೀಯ ನಾಯಕರ ಸಭೆ ನಡೆಸುತ್ತೇವೆ. ನನ್ನನ್ನು ಚುನಾವಣೆಗೆ ನಿಲ್ಲಲು ಸೂಚಿಸಿದರೆ ನಾನು ಸ್ಪರ್ಧೆ ಮಾಡುತ್ತೇನೆ. ಒಂದು ವೇಳೆ ಜೆಡಿಎಸ್ ಗೆ ಅವಕಾಶ ನೀಡಿದರೆ ಅವರಿಗೆ ಸಪೋರ್ಟ್ ಮಾಡುತ್ತೇವೆ. ಮುಂದಿನ ರಾಜಕೀಯ ದೃಷ್ಟಿಯಿಂದ ಒಟ್ಟಾಗಿ ಚುನಾವಣೆ ಎದುರಿಸುತ್ತೇವೆ ಎಂದು ಹೇಳಿದರು.