ರಾಮನಗರ, ಅ 11 (DaijiworldNews/HR): ತಮಿಳುನಾಡಿಗೆ ಹರಿಸುವಂತೆ ಮತ್ತೆ ಆದೇಶ ನೀಡಿರುವುದು ರಾಜ್ಯಕ್ಕೆ ಇನ್ನೊಂದು ದೊಡ್ಡ ಆಘಾತ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ತಮಿಳುನಾಡಿಗೆ ಮತ್ತೆ ಮುಂದಿನ 15 ದಿನಗಳ ಕಾಲ ನಿತ್ಯ 3000 ಕ್ಯೂಸೆಕ್ ನೀರು ಹರಿಸಲು ಕಾವೇರಿ ಜಲ ನಿಯಂತ್ರಣ ಸಮಿತಿ ರಾಜ್ಯಕ್ಕೆ ಆದೇಶ ನೀಡಿರುವ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಮಳೆಯ ಕೊರತೆಯಿಂದ ಜಲಾಶಯಗಳೆಲ್ಲ ಖಾಲಿ ಆಗಿದ್ದರೂ ಕರ್ನಾಟಕಕ್ಕೆ ಬರೆಯ ಮೇಲೆ ಬರೆ ಎಳೆಯಲಾಗುತ್ತದೆ. ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ಮುಂದಿನ 15 ದಿನಗಳ ಕಾಲ ನಿತ್ಯ 3,000 ಕ್ಯೂಸೆಕ್ ನೀರು ತಮಿಳುನಾಡಿಗೆ ಹರಿಸುವಂತೆ ಮತ್ತೆ ಆದೇಶ ನೀಡಿರುವುದು ರಾಜ್ಯಕ್ಕೆ ಇನ್ನೊಂದು ದೊಡ್ಡ ಆಘಾತ ಎಂದರು.
ಇನ್ನು ಈ ಆದೇಶಗಳು ಸಂವಿಧಾನ ಹಾಗೂ ಒಕ್ಕೂಟದ ಆಶಯಗಳಿಗೆ ವಿರುದ್ಧವಾಗಿದ್ದು, ಮಾತ್ರವಲ್ಲ ಕನ್ನಡಿಗರ ತಾಳ್ಮೆ, ಸಹನೆ ಪರೀಕ್ಷೆ ಮಾಡುವಂತಿವೆ. ಈ ಆದೇಶ ಕರ್ನಾಟಕದ ಹಿತಾಸಕ್ತಿಗೆ ಮರಣಶಾಸನ. ಬೆಂಗಳೂರು ಜನ ಕುಡಿಯುವ ನೀರಿನ ಬಿಕ್ಕಟ್ಟು ಎದುರಿಸುತ್ತಿದ್ದಾರೆ. ಹೀಗಿದ್ದರೂ ರಾಜ್ಯಕ್ಕೆ ಆದೇಶದ ಮೇಲೆ ಆದೇಶ ನೀಡಿ ಸಮಾನ ನ್ಯಾಯ ತತ್ವವನ್ನು ನಾಮಾವಶೇಷ ಮಾಡಲಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.