ಬೆಂಗಳೂರು, ಅ 19 (DaijiworldNews/MS): ಆಯುಧ ಪೂಜೆ ಸಂದರ್ಭದಲ್ಲಿ ಕುಂಕುಮ, ಅರಶಿನ, ಸುಣ್ಣ ಹಾಗೂ ಇತರೆ ರಾಸಾಯನಿಕ ಮಿಶ್ರಿತ ಬಣ್ಣಗಳನ್ನು ವಿಧಾನಸೌಧ, ವಿಕಾಸಸೌಧ ಸೇರಿದಂತೆ ಬಹುಮಹಡಿ ಕಟ್ಟಡಗಳಲ್ಲಿ ಬಳಸುವಂತಿಲ್ಲ ಎಂಬ ಸರ್ಕಾರದ ಈ ಆದೇಶ ಹಿಂದೂ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿತ್ತು.
ಇದೀಗ ಸ್ಪಷ್ಟನೆ ನೀಡಿರುವ ಸಿಎಂ ಸಿದ್ದರಾಮಯ್ಯ, ತಮ್ಮ ಸಾಮಾಜಿಕ ಜಾಲತಾಣದಲ್ಲಿ ಈ ಆದೇಶ ಹೊಸದೇನಲ್ಲ. ಬಿಜೆಪಿ ಸರ್ಕಾರವೂ ಮಾಡಿತ್ತು ಎಂದು ಸ್ಪಷ್ಟನೆ ನೀಡಿ, ಗೊಂದಲ ಪರಿಹರಿಸುವುದರ ಜೊತೆಗೆ ಹಳೆಯ ಆದೇಶಗಳ ಸಾಕ್ಷಿ ನೀಡಿದ್ದಾರೆ.
ಈ ಬಗ್ಗೆ ಪೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿರುವ ಆವರು, ಆಯುಧಪೂಜೆ ಸಂದರ್ಭದಲ್ಲಿ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡಗಳಲ್ಲಿ ರಾಸಾಯನಿಕಯುಕ್ತ ಅರಿಶಿನ-ಕುಂಕುಮ ಮತ್ತು ಇತರೆ ಬಣ್ಣಗಳನ್ನು ಕಚೇರಿಗಳ ಒಳಗೆ ಅಥವಾ ಕಾರಿಡಾರ್ಗಳಲ್ಲಿ ಬಳಸಬಾರದು ಎಂದು ಹೊರಡಿಸಿರುವ ಆದೇಶ ಇದು ಹೊಸತೇನಲ್ಲ. ಇವುಗಳು ಪಾರಂಪರಿಕ ಕಟ್ಟಡಗಳಾಗಿರುವುದರಿಂದ ರಾಸಾಯನಿಕಯುಕ್ತ ಬಣ್ಣಗಳು ನೆಲಹಾಸಿನ ಮೇಲೆ ಬಿದ್ದು, ಅವುಗಳ ಕಲೆ ಶಾಶ್ವತವಾಗಿ ಅಥವಾ ಬಹುಕಾಲ ಉಳಿಯುವುದರಿಂದ ಇದರಿಂದಾಗುವ ಹಾನಿ ತಪ್ಪಿಸಲು ಹಿಂದಿನ ಸರ್ಕಾರಗಳು ಪಾಲಿಸಿಕೊಂಡು ಬಂದಿದ್ದ ಸಂಪ್ರದಾಯವನ್ನೇ ನಾವು ಪಾಲಿಸಿದ್ದೇವೆ.
ಈ ಬಗ್ಗೆ ಸರ್ಕಾರದ ವಿರುದ್ಧ ನಡೆಸಲಾಗುತ್ತಿರುವ ಅಪಪ್ರಚಾರಕ್ಕೆ ಕಿವಿಗೊಡಬಾರದು ಎಂದು ಮನವಿ ಮಾಡುತ್ತೇನೆ" ಎಂದು ಬರೆದುಕೊಂಡಿದ್ದಾರೆ.