ನವದೆಹಲಿ, ಡಿ 12 (DaijiworldNews/AK): ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ಷೇಪಾರ್ಹ ಲೇಖನ ಪ್ರಕಟಿಸಿದ್ದಕ್ಕೆ ಶಿವಸೇನೆ ಉದ್ದವ್ ಠಾಕ್ರೆ ಬಣದ ನಾಯಕ ಸಂಜಯ್ ರಾವತ್ ವಿರುದ್ಧ ದೇಶದ್ರೋಹದ ಕೇಸ್ ದಾಖಲಾಗಿದೆ.
ಪಕ್ಷದ ಮುಖವಾಣಿ ಸಾಮ್ನಾದಲ್ಲಿ ಡಿ.11 ರಂದು ಪ್ರಕಟವಾದ ಲೇಖನ ದೂರುದ್ದೇಶದಿಂದ ಕೂಡಿದೆ ಎಂದು ಆರೋಪಿಸಿ ಬಿಜೆಪಿ ಯವತ್ಮಾಲ್ ಸಂಚಾಲಕ ನಿತಿನ್ ಭೂತಾಡ್ ದೂರು ನೀಡಿದ್ದರು.
ಉಮರಖೇಡ್ ಪೊಲೀಸ್ ಠಾಣೆಯಲ್ಲಿ ಸೋಮವಾರ ಪ್ರಕರಣ ದಾಖಲಾಗಿದ್ದು, ದೂರಿನ ಪ್ರಕಾರ ನಾವು ಪ್ರಕರಣವನ್ನು ದಾಖಲಿಸಿಕೊಂಡಿದ್ದೇವೆ ಮತ್ತು ಅದರ ಬಗ್ಗೆ ತನಿಖೆ ನಡೆಸುತ್ತೇವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ರಾವತ್ ಅವರು ಮೋದಿ ಮತ್ತು ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಆಗಾಗ ಟೀಕೆ ಮಾಡುತ್ತಲೇ ಇರುತ್ತಾರೆ. ಆದರೆ ಡಿ.11 ರಂದು ಮಧ್ಯಪ್ರದೇಶ ಫಲಿತಾಂಶಕ್ಕೆ ಸಂಬಂಧಿಸಿದಂತೆ ಲೇಖನ ಪ್ರಕಟವಾಗಿತ್ತು.
ತಮ್ಮ ‘ರೋಖ್ಥೋಕ್’ ಅಂಕಣದಲ್ಲಿ ತವರು ರಾಜ್ಯವಾದ ಮಧ್ಯಪ್ರದೇಶದಲ್ಲಿ ಶಿವರಾಜ್ ಸಿಂಗ್ ಅವರನ್ನು ಬಿಜೆಪಿ ಹೈಕಮಾಂಡ್ ಅವಮಾನಿಸಿದೆ. ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಗುರಿ ಕಾಂಗ್ರೆಸ್ ಅನ್ನು ಸೋಲಿಸುವುದು ಅಲ್ಲ ಬದಲಾಗಿ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಸಂಪೂರ್ಣವಾಗಿ ತೊಡೆದು ಹಾಕುವುದು ಎಂದು ಬರೆದಿದ್ದರು.