ಭೋಪಾಲ್, ಡಿ13 (DaijiworldNews/MR): ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿ ಮೋಹನ್ ಯಾದವ್ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಮಧ್ಯಪ್ರದೇಶದ ರಾಜ್ಯಪಾಲ ಮಂಗುಭಾಯ್ ಪಟೇಲ್ ಅವರು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳಾದ ರಾಜೇಂದ್ರ ಶುಕ್ಲಾ ಮತ್ತು ಜಗದೀಶ್ ದೇವದಾ ಅವರಿಗೆ ಪ್ರಮಾಣ ವಚನ ಬೋಧಿಸಿದರು.
ಕಳೆದ ತಿಂಗಳು ನಡೆದ ಚುನಾವಣೆಯಲ್ಲಿ ಉಜ್ಜಯಿನಿ ದಕ್ಷಿಣ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾದ ಯಾದವ್ ಅವರು, ಮಧ್ಯಪ್ರದೇಶದ ಹಿಂದಿನ ಶಿವರಾಜ್ ಸಿಂಗ್ ಚೌಹಾಣ್ ಸರ್ಕಾರದಲ್ಲಿ ಸಚಿವರಾಗಿದ್ದರು.
58 ವರ್ಷದ ಯಾದವ್ ಉಜ್ಜಯಿನಿ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿದ್ದಾರೆ. ಅವರು ಮೊದಲು 2013ರಲ್ಲಿ ಶಾಸಕರಾಗಿ ಆಯ್ಕೆಯಾದರು. ನಂತರ 2018ರಲ್ಲಿ ಎರಡನೇ ಬಾರಿಗೆ ಶಾಸಕ ಸ್ಥಾನವನ್ನು ಗೆದ್ದರು. ಉದ್ಯಮಿಯೂ ಆಗಿರುವ ಇವರು ಹಲವಾರು ವರ್ಷಗಳಿಂದ ಬಿಜೆಪಿಯಲ್ಲಿದ್ದಾರೆ.
ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಮಹಾರಾಷ್ಟ್ರ ಮುಖ್ಯಮಂತ್ರಿ ಶಿವಸೇನೆಯ ಏಕನಾಥ್ ಶಿಂಧೆ, ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ, ಕೇಂದ್ರ ಸಚಿವರಾದ ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ನಿತಿನ್ ಗಡ್ಕರಿ ಕೂಡ ಭಾಗವಹಿಸಿದ್ದರು.